ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಡಿ. 31 ಕರ್ನಾಟಕ ಬಂದ್

ಬೆಂಗಳೂರು: ಕನ್ನಡಿಗರ ಮೇಲೆ ನಿರಂತರ ದೌರ್ಜನ್ಯವೆಸಗುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್)ಯನ್ನು ನಿಷೇಧಿಸಲೇಬೇಕು ಎಂದು ಒತ್ತಾಯಿಸಿ ಕನ್ನಡ ಒಕ್ಕೂಟ ಕರ್ನಾಟಕ ಬಂದ್‍ಗೆ ಕರೆ ಕೊಟ್ಟಿದೆ.

ಒಕ್ಕೂಟದ ಮುಖಂಡರಾದ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು, ಪ್ರವೀಣ್‍ಕುಮಾರ್ ಶೆಟ್ಟಿ, ಶಿವರಾಮೇಗೌಡ,  ಕೆ.ಆರ್.ಕುಮಾರ್, ಗಿರೀಶ್‍ಗೌಡ, ಮಂಜುನಾಥ್ ದೇವು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ  ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಎಂಇಎಸ್ ಸಂಘಟನೆಯನ್ನು ನಿಷೇಸಬೇಕೆಂದು ಆಗ್ರಹಿಸಿ ಡಿ.31ರಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಕರ್ನಾಟಕ ಬಂದ್ ನಡೆಸಲು ತೀರ್ಮಾನಿಸಿರುವುದಾಗಿ ಮುಖಂಡರು ಸಭೆಯ ನಂತರ ತಿಳಿಸಿದ್ದಾರೆ.

ವಾಟಾಳ್ ನಾಗರಾಜ್ ಮಾತನಾಡಿ, ಇದು ಕರ್ನಾಟಕದ ಸ್ವಾಭಿಮಾನದ ಪ್ರಶ್ನೆಯಾಗಿದೆ.  ದೇಶದ್ರೋಹದ ಪ್ರಕರಣ ದಾಖಲಿಸುತ್ತೇವೆ. ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸುತ್ತೇವೆ ಎಂಬೆಲ್ಲ ರಾಜ್ಯ ಸರ್ಕಾರದ ತೀರ್ಮಾನಗಳನ್ನು ನಾವು ಒಪ್ಪುವುದಿಲ್ಲ ಎಂದು ಹೇಳಿದರು.

ಕಳೆದ 70 ವರ್ಷಗಳಿಂದ ಎಂಇಎಸ್ ಸಂಘಟನೆ ಕನ್ನಡಿಗರ ಮೇಲೆ ನಿರಂತರ ದೌರ್ಜನ್ಯ ಮಾಡುತ್ತಿದೆ. ಕನ್ನಡ ಧ್ವಜ ಸುಟ್ಟು ಕನ್ನಡಿಗರಿಗೆ ಅಪಮಾನ ಮಾಡಿದೆ. ಸರ್ಕಾರಿ ವಾಹನಗಳನ್ನು ಜಖಂಗೊಳಿಸಿ ಸರ್ಕಾರದ ಮೇಲೆ ದಾಳಿ ಮಾಡಿದೆ. ಇಂತಹ ಸಂಘಟನೆಗಳು ರಾಜ್ಯದಲ್ಲಿರುವುದಕ್ಕೆ ಲಾಯಕ್ಕಿಲ್ಲ. ಇದನ್ನು ನಿಷೇಧಿಸಲೇಬೇಕು ಎಂದು ಒತ್ತಾಯಿಸಿದರು.

ಡಿ.29ರ ವರೆಗೆ ರಾಜ್ಯ ಸರ್ಕಾರಕ್ಕೆ ಗಡುವು ನೀಡುತ್ತೇವೆ. ಅಷ್ಟರೊಳಗೆ ಸರ್ಕಾರ ತೀರ್ಮಾನ ಕೈಗೊಳ್ಳಬೇಕು. ಇಲ್ಲದಿದ್ದರೆ 31ರಂದು ನಾವು ಪ್ರತಿಭಟನೆ ನಡೆಸುತ್ತೇವೆ ಹಾಗೂ ಬಂದ್ ಗೆ ಕರೆಕೊಡುತ್ತೇವೆ ಎಂದು ಹೇಳಿದರು.