ರಚನಾತ್ಮಕ ಉದ್ಯೋಗ ನೀತಿ ಜಾರಿ-ಸಿಎಂ

ಬೆಳಗಾವಿ:ರಾಜ್ಯದಲ್ಲಿ ಶೀಘ್ರವೇ ರಚನಾತ್ಮಕವಾದ ಉದ್ಯೋಗ ನೀತಿಯನ್ನು ಜಾರಿಗೆ ತರಲಾಗುವುದು ಎಂದು   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಳಗಾವಿಯ ಗೋಗಟೆ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಹಮ್ಮಿಕೊಂಡಿದ್ದ ಸರ್ವರಿಗೂ ಉದ್ಯೋಗ ಕಾರ್ಯಕ್ರಮ ಲೋಕಾರ್ಪಣೆ ಮತ್ತು ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಉದ್ಯೋಗ ನೀತಿ ಜಾರಿಗೆ ತರುವ ಮೂಲಕ ಉದ್ಯೋಗ ಸೃಷ್ಟಿಗೆ ಒತ್ತು ನೀಡಿ ನಿರುದ್ಯೋಗ ಸಮಸ್ಯೆ ನಿವಾರಿಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

ಇದುವರೆಗೂ ಉದ್ಯೋಗದಾತರಿಗೆ  ಸಾಮಾನ್ಯ ಸೂತ್ರದಡಿ  ಉತ್ತೇಜಕಭತ್ಯೆ ನೀಡಿ ಪ್ರೋತ್ಸಾಹಿಸಲಾಗುತ್ತಿತ್ತು. ಇನ್ನುಮುಂದೆ ಯಾವ ಸಂಸ್ಥೆ ಎಷ್ಟು ಉದ್ಯೋಗಗಳನ್ನು ಸೃಷ್ಟಿಸಿದೆ ಎಂಬುದನ್ನು ಆಧರಿಸಿ ಪ್ರೋತ್ಸಾಹ ಕೊಡಲಾಗುತ್ತದೆ ಎಂದು‌ ಹೇಳಿದರು.

ರಾಜ್ಯದಲ್ಲಿ ಗುಣಮಟ್ಟದ ಶಿಕ್ಷಣ, ಕೌಶಲ್ಯ ಪೂರೈಕೆ ಮತ್ತು ಉದ್ಯೋಗ ಸೃಷ್ಟಿ ಈ ಮೂರೂ ಅಂಶಗಳು ಒಂದರ ಜೊತೆಯಲ್ಲಿ ಇನ್ನೊಂದಿರುವಂತೆ ವ್ಯವಸ್ಥೆಯನ್ನು ರೂಪಿಸಲಾಗಿದೆ ಎಂದರು.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ, ಶಿಕ್ಷಣ ಕ್ರಮವನ್ನು ಉದ್ಯೋಗದಾತ ಸಂಸ್ಥೆಗಳೊಂದಿಗೆ ಸಕ್ರಿಯವಾಗಿ ಬೆಸೆಯಲಾಗಿದೆ

ಇನ್ನೊಂದೆಡೆ ಉನ್ನತ ಶಿಕ್ಷಣ ಮತ್ತು ವೃತ್ತಿಪರ ಶಿಕ್ಷಣ ಸಂಸ್ಥೆಗಳನ್ನು ಜಾಗತಿಕ ಮಟ್ಟದ ಶೈಕ್ಷಣಿಕ ವಾತಾವರಣದೊಂದಿಗೆ ಬೆಸೆಯಲಾಗುತ್ತಿದೆ. ಇದಕ್ಕಾಗಿ ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆಗಳು ಹತ್ತಾರು ಒಡಂಬಡಿಕೆಗಳನ್ನು ಮಾಡಿಕೊಂಡಿವೆ ಎಂದು ಸಿಎಂ ವಿವರಿಸಿದರು.

ಸಚಿವರಾದ ಸಿ.ಎನ್.ಅಶ್ವತ್ಥನಾರಾಯಣ, ಶಶಿಕಲಾ ಜೊಲ್ಲೆ, ಬಸವರಾಜ ಭೈರತಿ, ಶಾಸಕ ಅಭಯ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.