ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿನ ವೈಷ್ಣೋದೇವಿ ದೇವಾಲಯದಲ್ಲಿ ಶನಿವಾರ ಬೆಳಗ್ಗೆ ಉಂಟಾದ ಕಾಲ್ತುಳಿತದಲ್ಲಿ ಕನಿಷ್ಠಪಕ್ಷ 12 ಮಂದಿ ಸಾವನ್ನಪ್ಪಿದ್ದಾರೆ.
ಹೊಸ ವರ್ಷದ ಮೊದಲ ದಿನವಾದ ಶನಿವಾರ ಬೆಳಿಗ್ಗೆಯಿಂದಲೇ ದೇವಿ ದರುಶನಕ್ಕೆ ಭಾರೀ ಜನಸಂದಣಿ ನೆರೆದು ನೂಕುನುಗ್ಗುಲಿನಿಂದ ಸಂಭವಿಸಿದ ಕಾಲ್ತುಳಿತದಲ್ಲಿ 12 ಮಂದಿ ಮೃತಪಟ್ಟು 20 ಮಂದಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ.
ದೇವಾಲಯದ ಗರ್ಭಗುಡಿಯದ 3ನೇ ನಂಬರ್ ಗೇಟ್‍ನಲ್ಲಿ ಕಾಲ್ತುಳಿತ ಸಂಭವಿಸಿದೆ.
ಹೊಸ ವರ್ಷದ ಪ್ರಯುಕ್ತ ಭಕ್ತಾಗಳು ದೇವಿಗೆ ಪೂಜೆ, ಪ್ರಾರ್ಥನೆ ನೆರವೇರಿಸಲು ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ ಕಾರಣ ನೂಕುನುಗಲಿನಿಂದ ಕಾಲ್ತುಳಿತ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಘಟನೆ ಬಗ್ಗೆ ದುಃಖ ವ್ಯಕ್ತಪಡಿಸಿ, ಮೃತರ ಕುಟುಂಬದವರಿಗೆ ಸಾಂತ್ವನ ತಿಳಿಸಿದ್ದಾರೆ.
ಮಾತಾ ವೈಷ್ಣೋದೇವಿ ಭವನ್‍ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬದವರಿಗೆ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ.ಗಳ ತಾತ್ಕಾಲಿಕ ಪರಿಹಾರವನ್ನು ಪ್ರಧಾನಿ ಮೋದಿ ಅವರು ಘೋಷಿಸಿದ್ದಾರೆ ಎಂದು ಪ್ರಧಾನಮಂತ್ರಿಯವರ ಕಾರ್ಯಾಲಯ ಟ್ವೀಟ್ ಮಾಡಿದೆ.
ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಅವರು ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

