ಮೈಸೂರು:ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏರುತ್ತಿರುವುದರಿಂದ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಕೆಲವು ಬಿಗಿ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ.ಇದಕ್ಕೆ ಜನರ ಸಹಕಾರ ಅಗತ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮನವಿ ಮಾಡಿಕೊಂಡಿದ್ದಾರೆ
ಕೋವಿಡ್ ನಿಯಂತ್ರಣಾ ಕ್ರಮಗಳನ್ನು ಚುರುಕುಗೊಳಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಈಗಾಗಲೇ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು ಜನರು ಅನಗತ್ಯವಾಗಿ ಹೊರ ಬರಬಾರದು ಎಂದು ಹೇಳಿದ್ದಾರೆ.
ಸರ್ಕಾರ ಹೊರಡಿಸಿರುವ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ.
ಪೊಲೀಸ್, ಅಧಿಕಾರಿಗಳೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಸಚಿವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಎರಡನೇ ಡೋಸ್ ಲಸಿಕೆ ಹಾಕಿಸುವ ಪ್ರಮಾಣ ಶೇ.100ರಷ್ಟು ತಲುಪಬೇಕು. ರೋಗ ಲಕ್ಷಣಗಳು ಕಂಡುಬಂದಾಕ್ಷಣ ಹೋಂ ಐಸೋಲೇಶನ್ ನಲ್ಲಿದ್ದು ಚಿಕಿತ್ಸೆ ಪಡೆದುಕೊಳ್ಳಬಹುದು ಎಂದಿದ್ದಾರೆ.
ವೈದ್ಯರ ಸಲಹೆ ನೀಡಿದರೆ ಮಾತ್ರ ಆಸ್ಪತ್ರೆಗೆ ದಾಖಲಾಗಬಹುದು.
ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪೂರೈಕೆ, ಹಾಸಿಗೆಗಳು, ವೆಂಟಿಲೇಟರ್ ಲಭ್ಯತೆ ಸೇರಿದಂತೆ ಕೋವಿಡ್ ರೋಗಿಗಳ ಚಿಕಿತ್ಸೆಗೆ ಬೇಕಿರುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ. ಸಾರ್ವಜನಿಕರು ಆತಂಕಗೊಳ್ಳುವುದು ಬೇಡ ಎಂದು ಸಚಿವರು ತಿಳಿಸಿದ್ದಾರೆ.

