ಬೆಂಗಳೂರು:ಜೀವನಾವಶ್ಯಕವಾದ ಹಾಲು, ನೀರು ಹಾಗೂ ವಿದ್ಯುತ್ ದರವನ್ನು ಹೆಚ್ಚಳ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು
ಯಾವುದೇ ಕಾರಣಕ್ಕೂ ಅವಸರದ ತೀರ್ಮಾನವನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದರು.
ಇತ್ತೀಚೆಗಷ್ಟೇ ಹಾಲಿನ ದರವನ್ನು ಪ್ರತಿ ಲೀಟರ್‍ಗೆ 3ರೂ., ವಿದ್ಯುತ್ ದರವನ್ನು ಯೂನಿಟ್‍ಗೆ 2 ರೂ. ಹಾಗೂ ನೀರಿನ ದರವನ್ನು ಹೆಚ್ಚಳ ಮಾಡಬೇಕೆಂದು ಸರ್ಕಾರಕ್ಕೆ ಆಯಾ ವಿಭಾಗದವರು ಪ್ರಸ್ತಾವನೆ ಸಲ್ಲಿಸಿದ್ದರು.
ಎಲ್ಲಾ ಸರ್ಕಾರಗಳು ಅಧಿಕಾರದಲ್ಲಿದ್ದಾಗ ಇಂತಹ ಪ್ರಸ್ತಾವನೆ ಬರುವುದು ಸಾಮಾನ್ಯ. ಹಾಲು, ನೀರು ಮತ್ತು ವಿದ್ಯುತ್ ದರ ಹೆಚ್ಚಳ ಮಾಡಲು ಪ್ರಸ್ತಾವನೆ ಬಂದಿರುವುದು ನಿಜ. ನಾವು ಎಲ್ಲಾ ಆಯಾಮಗಳಲ್ಲೂ ಚರ್ಚೆ ಮಾಡಿ ನಂತರ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿಎಂ ತಿಳಿಸಿದರು.
ಸರ್ಕಾರದ ಮಟ್ಟದಲ್ಲಿ ಈವರೆಗೂ ಚರ್ಚೆಯಾಗಿಲ್ಲ. ಸರ್ಕಾರ ಜನರ ಅಭಿಪ್ರಾಯದಂತೆ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಮುಂದೆ ನೋಡೋಣ ಎಂದು ಹೇಳಿದರು.
ನಾವು ಯಾವುದೇ ಒತ್ತಡಕ್ಕೆ ಮಣಿಯದೆ ವಾರಾಂತ್ಯದ ಲಾಕ್‍ಡೌನ್ ತೆರವುಗೊಳಿಸಿದ್ದೇವೆ.
ಕೂಲಿಕಾರ್ಮಿಕರು, ಆಟೋ , ಬೀದಿ ಬದಿ ವ್ಯಾಪರಿಗಳು, ಗುಡಿ ಕೈಗಾರಿಕೆಗಳು ಸೇರಿದಂತೆ ಯಾರಿಗೂ ತೊಂದರೆಯಾಗಬಾರದೆಂಬ ಕಾರಣಕ್ಕಾಗಿ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಲಾಯಿತು ಎಂದು ತಿಳಿಸಿದರು.
ಜೀವನವೂ ನಡೆಯಬೇಕು ಜೀವವೂ ಇರಬೇಕು. ಕೋವಿಡ್ ಯಾರನ್ನೂ ಬಿಟ್ಟಿಲ್ಲ. ಎಲ್ಲರೂ ಎಚ್ಚರಿಕೆಯಿಂದ ಇದ್ದು ಸರ್ಕಾರದ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ಸಿಎಂ ಮನವಿ ಮಾಡಿದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಕೊರೊನಾ ಪಾಸಿಟಿವ್ ಬಂದಿರುವುದಿ ನನ್ನ ಗಮನಕ್ಕೆ ಬಂದಿದೆ. ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರ ಕುಟುಂಬದವರು ಹಾಗೂ ವೈದ್ಯರ ಜತೆ ಮಾತನಾಡುತ್ತೇನೆ ಎಂದು ಇದೇ ವೇಳೆ ಬೊಮ್ಮಾಯಿ ತಿಳಿಸಿದರು.
ಕಾವೇರಿ, ಕೃಷ್ಣ, ಮಹದಾಯಿ ಜಲ ವಿವಾದಕ್ಕೆ ಸಂಬಂಸಿದಂತೆ ವಕೀಲರ ಜತೆ ಕಾನೂನು ಹೋರಾಟಗಳ ಬಗ್ಗೆ ಮಾಹಿತಿ ಪಡೆಯಲಿದ್ದೇನೆ. ಕೃಷ್ಣ ಐತೀರ್ಪಿನ 1ನೇ ಮತ್ತು ಬಚಾವತ್ ತೀರ್ಪಿನಂತೆ ಕರ್ನಾಟಕಕ್ಕೆ ನಿಗದಿಯಾಗಿದ್ದ ನೀರಿನ ಬಳಕೆ ಮಾಡಿಕೊಳ್ಳಬೇಕು.
ಆದರೆ, ನೆರೆಯ ರಾಜ್ಯಗಳು ಇದನ್ನು ಸಹ ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸಿವೆ ಎಂದು ಹೇಳಿದರು.
ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಸಿದಂತೆ ನ್ಯಾಯಧೀಕರಣ ತೀರ್ಪು ನೀಡಿದ ಬಳಿಕ ಅಧಿಸೂಚನೆ ಹೊರಡಿಸಲಾಗಿತ್ತು.
ಆದರೆ, ಇದನ್ನೂ ಸಹ ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸಲಾಗಿದೆ. ಇದೇ ರೀತಿ ಮೇಕೆದಾಟು ಯೋಜನೆಗೂ ಸಹ ತಮಿಳುನಾಡು ತಗಾದೆ ತೆಗೆದಿದೆ. ಈ ಎಲ್ಲಾ ಸಾಧಕ-ಬಾಧಕಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ ಎಂದು ತಿಳಿಸಿದರು.

