ಬೆಂಗಳೂರು: ಆಶ್ರಯ ಕೊಟ್ಟ ಪಕ್ಷ ಮತ್ತು ಆ ಪಕ್ಷದಲ್ಲಿನ ಮೂಲನಿವಾಸಿಗಳನ್ನು ಮುಗಿಸುವುದು ಸಿದ್ಧಾಂತವೇ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅಕ್ಕಪಕ್ಕದವರ ತಟ್ಟೆಯಲ್ಲಿರುವುದನ್ನು ಎಗರಿಸುವುದು, ಆಪರೇಷನ್ ಹಸ್ತ ಸಿದ್ಧಾಂತವೇ? ನೀವು ಜೆಡಿಎಸ್ ಸಿದ್ಧಾಂತದ ಬಗ್ಗೆ ಮಾತನಾಡುತ್ತೀರಿ? ನಾಚಿಕೆಯಾಗಬೇಕು ಎಂದು ಟ್ವಿಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುಳ್ಳು ನಿಮ್ಮ ರಾಜಕೀಯದ ಅಡಿಪಾಯ. ಸುಳ್ಳೇ ನಿಮ್ಮ ರಾಜಕೀಯ ಅಸ್ತಿತ್ವದ ಪ್ರತೀಕ. ಸುಳ್ಳು ನಿಮ್ಮ ನರಿಬುದ್ಧಿ ಅವಕಾಶವಾದಿ ರಾಜಕಾರಣ ನಿಜಸ್ವರೂಪ ಎಂದು ಟೀಕಿಸಿದ್ದಾರೆ.
ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ. ಪಕ್ಷ ಕಟ್ಟುವ ಧಂ ಇಲ್ಲ. ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವ, ಕಂಡೋರ ಕಷ್ಟದ ಮೇಲೆ ಅಧಿಕಾರ ಅನುಭವಿಸುವ ಸಿದ್ದರಾಮಯ್ಯ ಎಂದು ವಾಗ್ದಾಳಿ ನಡೆಸಿದ್ದಾರೆ.
ತುಕುಮೂರಿನಿಂದ ಜೆಡಿಎಸ್ ಓಡಿಸಿ ಅನ್ನುವುದಕ್ಕೆ ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ? ಅಥವಾ ಕಾಂಗ್ರೆಸ್‌ನ ಪಿತ್ರಾರ್ಜಿತ ಆಸ್ತಿಯೆ ಎಂದು ಪ್ರಶ್ನಿಸಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದಿಂದ ನಿಮ್ಮನ್ನು ಜನರು ಓಡಿಸಿದ್ದು ಮರೆತುಬಿಟ್ಟಿರಾ? ಈ ಸಲ ಬಾದಾಮಿ ಕ್ಷೇತ್ರದಿಂದಲೂ ಓಡಬೇಕಾಗುತ್ತದೆ. ಕಾಯಿರಿ ಎಂದಿದ್ದಾರೆ.
ಕಾಂಗ್ರೆಸ್ ಸೇರುವ ಮುನ್ನ ನೀವು ಯಾರ ಬಾಲಂಗೋಚಿ ಆಗಿದ್ದಿರಿ? ಗುರುಸ್ವಾಮಿ ಅವರೆದುರು ಸೋತುಸುಣ್ಣವಾದ ಮೇಲೆ ಅನುಗ್ರಹಕ್ಕೆ ಬಂದು ಯಾರ ಮುಂದೆ ಗಳಗಳನೆ ಅತ್ತು ರಾಜಕೀಯ ಬಿಟ್ಟು, ವಕೀಲಿ ಮಾಡುತ್ತೇನೆ ಎಂದಿರಿ ಅನ್ನುವುದು ನೆನಪಿದೆಯಾ ಸಿದ್ದರಾಮಯ್ಯ? ಆಗ ನಿಮಗೆ ಬಾಲಂಗೋಚಿತನ ನೆನಪಾಗಲಿಲ್ಲವೆ ಎಂದು ಪ್ರಶ್ನಿಸಿದ್ದಾರೆ.

