ನವದೆಹಲಿ:ಪ್ರಧಾನಮಂತ್ರಿ ಗತಿ ಶಕ್ತಿ ಯೋಜನೆಯಡಿ ಪ್ರಸಕ್ತ ಹಣಕಾಸಿನ ವರ್ಷದಲ್ಲಿ 60 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
ಸಂಸತ್‍ನಲ್ಲಿ 2022-23ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಕೋವಿಡ್ ಸಂಕಷ್ಟದಲ್ಲಿಯೂ ದೇಶದ ಆರ್ಥಿಕ ಪರಿಸ್ಥಿತಿ ಚೇತರಿಸಿಕೊಳ್ಳುತ್ತಿದೆ.ಈ ಹಣಕಾಸು ವರ್ಷದಲ್ಲಿ ಪ್ರಧಾನಮಂತ್ರಿ ಗತಿ ಶಕ್ತಿ ಯೋಜನೆಯಡಿ 60 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಿ ಯುವಕರಿಗೆ ನೀಡುತ್ತೇವೆ ಎಂದು ಪ್ರಕಟಿಸಿದರು.
ಯುವಕರು ಮತ್ತು ಮಹಿಳೆಯರ ಸಬಲೀಕರಣ ಮಾಡುವುದೇ ನಮ್ಮ ಸರ್ಕಾರದ ಗುರಿಯಾಗಿದೆ. ಬಡತನದಿಂದ ಮೇಲೆತ್ತಲು ಈ ಉದ್ಯೋಗಗಳು ಅನುಕೂಲವಾಗಲಿದೆ ಎಂದು ಅವರು ಹೇಳಿದರು.
ಆತ್ಮ ನಿರ್ಭರ್ ಭಾರತ್ ಯೋಜನೆಗೆ ದೇಶಾದ್ಯಂತ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತವಾಗಿದೆ.
ಉದ್ಯೋಗ ಸೃಷ್ಟಿಗೆ ಪಿಎಲ್‍ಐ ಯೋಜನೆಯನ್ನು ಸೇರ್ಪಡೆ ಮಾಡಲಿದ್ದೇವೆ. 60 ಲಕ್ಷ ಹೊಸ ಉದ್ಯೋಗಗಳ ಸೃಷ್ಟಿಗೆ 30 ಲಕ್ಷ ಕೋಟಿ ಬಂಡವಾಳ ಹೂಡಿಕೆಯಾಗಲಿದೆ ಎಂದು ಹೇಳಿದರು.
ಫೆ.10ರಂದು ಉತ್ತರಪ್ರದೇಶ ಮೊದಲ ಹಂತ ಹಾಗೂ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮತದಾರರನ್ನು ಓಲೈಸಲು ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಯ ಆಶ್ವಾಸನೆಯನ್ನು ನೀಡಿದೆ ಎಂದು ಹೇಳಲಾಗುತ್ತಿದೆ.

