ಬೆಂಗಳೂರು:ಸಂಪುಟ ವಿಸ್ತರಣೆಗೆ ಶಾಸಕರಿಂದ ಒತ್ತಡ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವರಿಷ್ಠರ ಜೊತೆ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ದೆಹಲಿಗೆ ತೆರಳಲಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಬುಧವಾರ ಮಾತನಾಡಿದ ಅವರು ದೆಹಲಿಯಲ್ಲಿ ಸಂಸತ್ ಸದಸ್ಯರ ಸಭೆ ಇದೆ ಸಂಸದರುಗಳ ಮನವಿ ಮೇರೆಗೆ ಸೋಮವಾರ ದೆಹಲಿಗೆ ಹೋಗುತ್ತಿರುವುದಾಗಿ ತಿಳಿಸಿದರು.
ಸಂಸದರ ಮನವಿ ಮೇರೆಗೆ ದೆಹಲಿಗೆ ಹೋಗುವುದಾಗಿ ತಿಳಿಸಿದ್ದರೂ ಸಿಎಂ, ಎರಡು ದಿನಗಳ ಕಾಲ ದೆಹಲಿಯಲ್ಲೆ ವಾಸ್ತವ್ಯ ಹೂಡಲಿದ್ದು ಪ್ರಧಾನಿ ನರೇಂದ್ರಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಷಾ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮತ್ತಿತರ ಪ್ರಮುಖರನ್ನು ಭೇಟಿಯಾಗಲಿದ್ದಾರೆ ಎಂದು ಹೇಳಲಾಗುತ್ತದೆ.
ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ, ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ, ಕಳೆದ ಆರು ತಿಂಗಳ ಸರ್ಕಾರದ ಸಾಧನೆ, ಕೋವಿಡ್ ನಿರ್ವಹಣೆ ಸೇರಿದಂತೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಸಿಎಂ ಚರ್ಚೆ ನಡೆಸಲಿದ್ದಾರೆ.
ಸಿಎಂ ಬೊಮ್ಮಾಯಿ ಅವರು ದೆಹಲಿಗೆ ತೆರಳುತ್ತಿದ್ದಾರೆ ಎಂಬ ಸುದ್ದಿ ಹಬ್ಬುತ್ತಿದ್ದಂತೆ ಕೆಲವು ಸಚಿವರಲ್ಲಿ ಎದೆಬಡಿತ ಜೋರಾಗಿದೆ.
ಈ ಬಾರಿ ವಿಸ್ತರಣೆ ಮಾತ್ರವಲ್ಲದೆ ಪುನಾರಚನೆಯಾಗುವುದು ಬಹುತೇಕ ಖಚಿತವಾಗಿರುವುದರಿಂದ ಎಲ್ಲಿ ತಮ್ಮನ್ನು ಕೈ ಬಿಡಲಿದ್ದಾರೋ ಎಂಬ ಆತಂಕ ಕೆಲವರನ್ನು ಕಾಡುತ್ತಿದೆ.
ಸಂಪುಟ ಪುನಾರಚನೆಯಾದರೆ 8ಕ್ಕೂ ಹೆಚ್ಚು ಸಚಿವರು ಗೇಟ್‍ಪಾಸ್ ಪಡೆಯಲಿದ್ದು, ಪಕ್ಷ ನಿಷ್ಠರಿಗೆ ಮಣೆ ಹಾಕುವ ಸಂಭವವಿದೆ.
ಮುಂದಿನ ವರ್ಷ ಮೇನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ, ಕೆಲವು ಹಿರಿಯರನ್ನು ಪಕ್ಷ ಸಂಘಟನೆಗೆ ನಿಯೋಜಿಸಿ, ಸಂಘ ಪರಿವಾರದ ಹಿನ್ನೆಲೆ ಹೊಂದಿರುವವರನ್ನೇ ಸಂಪುಟಕ್ಕೆ ತೆಗೆದುಕೊಳ್ಳಲು ಚಿಂತನಮಂಥನ ನಡೆದಿದೆ.
ಕೆಲವು ಸಚಿವರು ಶಾಸಕರ ಕೆಲಸಕಾರ್ಯಗಳನ್ನು ಮಾಡಿಕೊಡುತ್ತಿಲ್ಲ ಎಂಬ ಆರೋಪವೂ ಇದ್ದು,ಶಾಸಕಾಂಗ ಸಭೆಯಲ್ಲೂ ಕೆಲವು ಸಚಿವರ ವಿರುದ್ಧ ಶಾಸಕರು ಬಹಿರಂಗವಾಗಿಯೇ ಕಿಡಿಕಾಡಿದ್ದರು.
ಸಚಿವರಾದ ಗೋವಿಂದ ಕಾರಜೋಳ, ಕೆ.ಎಸ್.ಈಶ್ವರಪ್ಪ, ವಿ.ಸೋಮಣ್ಣ, ಪ್ರಭು ಚವ್ಹಾಣ್, ಶಶಿಕಲಾ ಜೊಲ್ಲೆ, ಕೆ.ಸಿ.ನಾರಾಯಣಗೌಡ, ಮುರುಗೇಶ್ ನಿರಾಣಿ ಸೇರಿದಂತೆ ಕನಿಷ್ಠ ಪಕ್ಷ 8-10 ಸಚಿವರು ಸ್ಥಾನ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ. ಬಿಬಿಎಂಪಿ ಚುನಾವಣೆ ಕಾರಣಕ್ಕಾಗಿ ಕಂದಾಯ ಸಚಿವ ಆರ್.ಅಶೋಕ್ ತಲೆದಂಡವಾಗುವ ಭೀತಿಯಿಂದ ಪಾರಾಗಿದ್ದಾರೆ, ಸದನದಲ್ಲಿ ಪ್ರತಿಪಕ್ಷಗಳನ್ನು ಎದುರಿಸುವ ಕಾರಣಕ್ಕಾಗಿ ಮಾಧುಸ್ವಾಮಿ ಕೂಡ ಮುಂದುವರೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

