ನಾಡೋಜ ಡಾ.ಚನ್ನವೀರ ಕಣವಿ ವಿಧಿವಶ

ಹುಬ್ಬಳ್ಳಿ: ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ ಚಂಬೆಳಕಿನ ಕವಿ ನಾಡೋಜ ಡಾ.ಚನ್ನವೀರ ಕಣವಿ ಅವರು ದೀರ್ಘ ಕಾಲದ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

ಕೋವಿಡ್ ಸೋಂಕಿನಿಂದ ಸಂಪೂರ್ಣ ಚೇತರಿಕೆ ಕಂಡಿದ್ದ ಕಣವಿ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಜ.14ರಂದು ಎಸ್‍ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.

ಕಣವಿ ಅವರ ಪಾರ್ಥಿವ ಶರೀರವನ್ನು ಕರ್ನಾಟಕದ ಕಲಾ ಮಹಾವಿದ್ಯಾಲಯದಲ್ಲಿ  ಅಂತಿಮ ದರ್ಶನಕ್ಕೆ ಇಡಲಾಗಿತ್ತು.

ಇಲ್ಲಿಗೆ ಆಗಮಿಸಿದ ಬಂಧುಮಿತ್ರರು, ಸಾಹಿತ್ಯ ಬಳಗ, ರಾಜಕಾರಣಿಗಳು, ಬರಹಗಾರರು, ವಿದ್ಯಾರ್ಥಿಗಳು ಅಂತಿಮ ದರ್ಶನ ಪಡೆದು ಕಣವಿ ಅವರ ಆತ್ಮಕ್ಕೆ ಶಾಂತಿ ಕೋರಿದರು.

ಜೂನ್ 28, 1928ರಂದು ಧಾರವಾಡ ಜಿಲ್ಲೆಯ ಹೊಂಬಳದಲ್ಲಿ ಚನ್ನವೀರ ಕಣವಿ ಜನಿಸಿದರು. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ 1950ರಲ್ಲಿ ಬಿ.ಎ ಪದವಿ, 1952ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ ಪದವಿಯನ್ನೂ ಗಳಿಸಿದರು.

1952ರಲ್ಲಿ ಕರ್ನಾಟಕದ ವಿಶ್ವವಿದ್ಯಾನಿಲಯದ ಪ್ರಸಾರಾಂಗದಲ್ಲಿ ಕಾರ್ಯದರ್ಶಿಯಾಗಿ ಸೇವೆ ಪ್ರಾರಂಭಿಸಿದ ಕಣವಿ ಅವರು ಅನಂತರ 1958ರಲ್ಲಿ ಅದರ ನಿರ್ದೇಶಕರಾದರು.

ಹಲವಾರು ಪ್ರಶಸ್ತಿಗಳು ಕಣವಿ ಅವರ ಸಾಹಿತ್ಯ ಸಾಧನೆಗಾಗಿ ಬಂದಿವೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ(1981), ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ(1985), ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ(1989), ಭಾರತ ಸರಕಾರದ ಮಾನವ ಸಂಪನ್ಮೂಲ ಇಲಾಖೆಯ ಸಂಸ್ಕೃತಿ ವಿಭಾಗದ ಎಮರಿಟಿಸ್ ಫೆಲೋಷಿಪ್(1996-98), ಪಂಪ ಪ್ರಶಸ್ತಿ(1999), ಅನಕೃ ಪ್ರತಿಷ್ಠಾನ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯ ನಾಡೋಜ ಪ್ರಶಸ್ತಿ ಸಿಕ್ಕಿದೆ. ಕರ್ನಾಟಕ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಅವರನ್ನು ಸನ್ಮಾನಿಸಿದೆ.

ಸಂತಾಪ: ಕಣವಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,  ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಕೆ.ಗೋಪಾಲಯ್ಯ, ಮುರುಗೇಶ್ ನಿರಾಣಿ, ಎಸ್.ಟಿ.ಸೋಮಶೇಖರ್, ಮಾಜಿ ಸಚಿವ ವಿನಯ್‍ಕುಮಾರ್ ಕುಲಕರ್ಣಿ,  ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ರಾಜಕೀಯ ಗಣ್ಯರು, ಸಾಹಿತಿಗಳು ಸಂತಾಪ ಸೂಚಿಸಿದ್ದಾರೆ.