ಭಜರಂಗದಳದ ಕಾರ್ಯಕರ್ತನ ಹತ್ಯೆ: ಶಿವಮೊಗ್ಗದಲ್ಲಿ ಹೈ ಅಲರ್ಟ್ ಘೋಷಣೆ

ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತ ಹರ್ಷ ಎಂಬಾತನನ್ನು ಭೀಕರವಾಗಿ ಹತ್ಯೆ ಮಾಡಲಾಗಿದ್ದು ಶಿವಮೊಗ್ಗ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಯುವಕರ ಗುಂಪೊಂದು ಹರ್ಷನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ. ಹೊಟ್ಟೆ, ತಲೆ ಭಾಗಕ್ಕೆ ಗಂಭೀರ ಗಾಯವಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಆತನನ್ನು ಒಕೂಡಲೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

ಶಿವಮೊಗ್ಗದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ.

ಶಿವಮೊಗ್ಗದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಷಲಾಗಿದ್ದು,144 ಸೆಕ್ಷನ್ ಜಾರಿ ಮಾಡಲಾಗಿದೆ.

ಶಿವಮೊಗ್ಗದವರೇ ಆದ ಗೃಹ ಸಚಿವ ಅರಗ ಜ್ಞಾನೇಂದ್ರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

ಕೆಲ ಸಮಾಜಘಾತುಕ ಶಕ್ತಿಗಳು ಪರಿಸ್ಥಿತಿಯ ದುರ್ಲಾಭ ಪಡೆಯಬಹುದೆಂಬ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೂರ್ವ ವಲಯ ಡಿಐಜಿ ತ್ಯಾಗರಾಜನ್ ಹಾಗೂ ಎಸ್‍‌ ಪಿ ಲಕ್ಷ್ಮಿಪ್ರಸಾದ್  ಪರಿಸ್ಥಿತಿ ನಿಯಂತ್ರಿಸಲು ಕ್ರಮ ಕೈಗೊಂಡಿದ್ದಾರೆ.

ಯಾವುದೇ ಆಹಿತಕರ ಘಟನೆ ನಡೆಯದಂತೆ ಬೇರೆ ಜಿಲ್ಲೆಗಳಿಂದಲೂ ಹೆಚ್ಚಿನ ಪೊಲೀಸ್ ಸಿಬ್ಬಂದಿ ಕರೆಸಿಕೊಳ್ಳಲಾಗಿದೆ.

ಸೀಗೆಹಟ್ಟಿಯಲ್ಲಿ ಮನೆ ಮುಂದೆ ನಿಂತಿದ್ದ ಮೂರು ಬೈಕ್ ಹಾಗೂ ಒಂದು ಟಾಟಾ ಏಸ್‍ ವಾಹನಕ್ಕೆ ಬೆಂಕಿ ಹಚ್ಚಲಾಗಿದೆ.ಜತೆಗೆ ಕಲ್ಲು ತೂರಾಟ ನಡೆದಿದ್ದು, ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿವೆ.