ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಯುವಕನ ಹತ್ಯೆ ಘಟನೆಯ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದ್ದು, ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ಹಿಜಬ್ ವಿಷಯಕ್ಕಾಗಿಯೇ ಮತೀಯ ಸಂಘಟನೆ ಹಿನ್ನೆಲೆ ಇದೆಯೇ ಎಂಬುದು ಸೇರಿದಂತೆ ಸಮಗ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಈ ರೀತಿಯ ಕೊಲೆಗಳು ನಿಲ್ಲಬೇಕು.ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. 12ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಈ ಘಟನೆಯ ಹಿನ್ನಲೆ, ಮುನ್ನಲೆ ಎಲ್ಲವೂ ಹೊರಗೆ ಬರಬೇಕಾಗಿದೆ. ಹಿರಿಯ ಅಧಿಕಾರಿಗಳು ಶಿವಮೊಗ್ಗದಲ್ಲಿದ್ದು ಪರಿಸ್ಥಿತಿಯನ್ನು ನಿಯಂತ್ರಿಸುತ್ತಿದ್ದಾರೆ. ಅಲ್ಲಲ್ಲಿ ಕೆಲವು ಘಟನೆಗಳು ನಡೆದಿವೆ. ಕಾನೂನು ಉಲ್ಲಂಘಿಸಿದವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರಗ ಜ್ಞಾನೇಂದ್ರ ತಿಳಿಸಿದರು.
ಶಿವಮೊಗ್ಗದಲ್ಲಿ ಪೊಲೀಸ್ ಸಿಬ್ಬಂದಿ ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸುವುದಿಲ್ಲ. ಕಾಂಗ್ರೆಸ್‍ನವರ ಟೀಕೆಗಿಂತ ರಾಜ್ಯದಲ್ಲಿ ಶಾಂತಿ ಕಾಪಾಡುವುದು ಮುಖ್ಯ, ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಗೃಹ ಸಚಿವರು ಹೇಳಿದರು.

