ರೈತರನ್ನು ಬದುಕಿಸಲು ನಡಿಗೆ ಕಾರ್ಯಕ್ರಮ ಮತ್ತೆ ಪ್ರಾರಂಭ -ಡಿಕೆಶಿ

ಬೆಂಗಳೂರು: ಬೆಂಗಳೂರು ನಾಗರೀಕರಿಗೆ ಕುಡಿಯುವ ನೀರು ಪೂರೈಸಲು ಹಾಗೂ ಕಾವೇರಿ ಪ್ರದೇಶದ ರೈತರನ್ನು ಬದುಕಿಸಲು ನೀರಿಗಾಗಿ ನಡಿಗೆ ಕಾರ್ಯಕ್ರಮವನ್ನು ಎಲ್ಲಿ ನಿಲ್ಲಿಸಿದ್ದೇವೋ ಅಲ್ಲಿಂದ ಮತ್ತೆ ಆರಂಭಿಸುತ್ತೇವೆ  ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ಮೇಕೆದಾಟುವಿನಿಂದ ರಾಮನಗರದವರೆಗೆ ಪಾದಯಾತ್ರೆ ಮಾಡಿದ್ದೆವು. ಈ ಮಧ್ಯೆ ಕೋವಿಡ್ ಮೂರನೇ ಅಲೆ ಸಂದರ್ಭದಲ್ಲಿ ಜನರ ಆರೋಗ್ಯ, ಕೋರ್ಟ್ ಆದೇಶಕ್ಕೆ ಗೌರವ ಸೂಚಿಸಲು ಈ ಪಾದಯಾತ್ರೆಯನ್ನು ನಿಲ್ಲಿಸಿದ್ದೆವು ಈಗ ಮತ್ತೆ ಪ್ರಾರಂಭಿಸುತ್ತೇವೆ ಎಂದು ಹೇಳಿದರು.

ಇದು ಪಕ್ಷಾತೀತ ಹೋರಾಟ. ಈ ಹೋರಾಟದ ಮುಂದಾಳತ್ವವನ್ನು ಕಾಂಗ್ರೆಸ್ ಪಕ್ಷ ವಹಿಸಿಕೊಂಡಿದೆ. ಎಲ್ಲ ಅಪಾರ್ಟ್‌ಮೆಂಟ್ ಸಂಘಗಳು, ಕಾರ್ಮಿಕ, ಕೈಗಾರಿಕಾ ಸಂಘಟನೆ, ಎನ್ ಜಿ ಒಗಳು, ಚಿತ್ರರಂಗದವರು, ಧರ್ಮಗುರುಗಳು, ಜನಸಾಮಾನ್ಯರು ಈ ಪಾದಯಾತ್ರೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದು ತಿಳಿಸಿದರು.

ಮಾರ್ಚ್ 3 ರಂದು ಮಧ್ಯಾಹ್ನ ಪಾದಯಾತ್ರೆ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನ ತಲುಪಲಿದ್ದು, ಅಂದು ಇಲ್ಲಿ ಸಭೆ ನಡೆಸಲಾಗುವುದು.

ನಾವು ಐದು ದಿನಗಳ ಕಾಲ ಬೆಂಗಳೂರು ನಗರದಲ್ಲಿ ಪಾದಯಾತ್ರೆ ಮಾಡಬೇಕಾಗಿತ್ತು, ಬಜೆಟ್ ಅವೇಶನ ಇರುವ ಕಾರಣ ಕೇವಲ 3 ದಿನ ಪಾದಯಾತ್ರೆ ಮಾಡುತ್ತೇವೆ ಎಂದು ಡಿಕೆಶಿ ಹೇಳಿದರು.

ಪಾದಯಾತ್ರೆಗೆ ಬರುವವರು ಸಾಧ್ಯವಾದಷ್ಟು ಮೆಟ್ರೋ ಬಳಸಿ ಎಂದು ಮನವಿ ಮಾಡುತ್ತೇನೆ ಎಂದು ಹೇಳಿದರು.