ಗುಂಡ್ಲುಪೇಟೆ ತಾಲ್ಲೂಕಿನ ವಿವಿಧ ಗಣಿ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳ ನೇತೃತ್ವದ ತಂಡ ಭೇಟಿ: ಪರಿಶೀಲನೆ

ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ

 ಚಾಮರಾಜನಗರ: ವಸತಿ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರ ನಿರ್ದೇಶನದ ಮೇರೆಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರ ನೇತೃತ್ವದ ಅಧಿಕಾರಿಗಳ ತಂಡ ಭಾನುವಾರ ಗುಂಡ್ಲುಪೇಟೆ ತಾಲ್ಲೂಕಿನ ವಿವಿಧ ಗಣಿಗಾರಿಕೆ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿತು.

ಗುಂಡ್ಲುಪೇಟೆ ತಾಲ್ಲೂಕಿನ ಮಡಹಳ್ಳಿಯ ಗುಡ್ಡಕುಸಿತ ದುರಂತದ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ            ವಿ. ಸೋಮಣ್ಣ ಅವರು ಜಿಲ್ಲೆಯಲ್ಲಿರುವ ಎಲ್ಲಾ ಗಣಿಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಕಾನೂನುಬದ್ದ ಹಾಗೂ ನಿಯಮಾನುಸಾರ ಗಣಿಗಾರಿಕೆ ನಡೆಸಲಾಗುತ್ತಿದೆಯೇ ಎಂಬ ಬಗ್ಗೆ ಪರಿಶೀಲಿಸಲು ಜಿಲ್ಲಾಧಿಕಾರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿಗಳ ಸಮಿತಿಯ ತಂಡ ಕ್ರಮ ವಹಿಸುವಂತೆ ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಯವರಾದ ಚಾರುಲತಾ ಸೋಮಲ್ ಅವರು ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಪರಿಶೀಲನೆ ಕಾರ್ಯ ನಡೆಸಿದ್ದಾರೆ.

ಬೆಳಿಗ್ಗೆಯಿಂದಲೇ ಪರಿಶೀಲನಾ ಕಾರ್ಯವನ್ನು ಜಿಲ್ಲಾಧಿಕಾರಿಗಳ ನೇತೃತ್ವದ ತಂಡ ಆರಂಭಿಸಿತು. ಗುಂಡ್ಲುಪೇಟೆ ತಾಲ್ಲೂಕಿನ ಕೂತನೂರು, ಹಸಗೂಲಿ, ರಂಗೂಪುರ, ಬೆಳಚಲವಾಡಿ, ಹಿರಿಕಾಟಿಯಲ್ಲಿರುವ ಹಲವು ಕಟ್ಟಡ ಕಲ್ಲು ಗಣಿ ಗುತ್ತಿಗೆ ಪ್ರದೇಶಗಳಿಗೆ ಭೇಟಿ ನೀಡಿ ವ್ಯಾಪಕವಾಗಿ ಪರಿಶೀಲಿಸಿತು.

ಗಣಿಗಾರಿಕೆ ಗುತ್ತಿಗೆ ನೀಡಿರುವ ಪ್ರದೇಶದ ವಿಸ್ತೀರ್ಣ, ಗಣಿಗಾರಿಕೆ ನಡೆಸಿರುವ ಪ್ರಮಾಣ, ಪರವಾನಗಿ ಷರತ್ತುಗಳು, ಗಣಿಗಾರಿಕೆ ನಡೆಸಲು ಸುರಕ್ಷಿತ ಕ್ರಮಗಳನ್ನು ಪಾಲಿಸಲಾಗುತ್ತಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಉಪ ವಿಭಾಗಾಧಿಕಾರಿ ಡಾ. ಗಿರೀಶ್ ದಿಲೀಪ್ ಬಡೋಲೆ, ಡಿವೈಎಸ್‍ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ತಹಶೀಲ್ದಾರ್ ರವಿಶಂಕರ್, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕರಾದ ನಾಗಭೂಷಣ್, ಸ್ಥಳೀಯ ಕಂದಾಯ ಅಧಿಕಾರಿಗಳು, ಭೂವಿಜ್ಞಾನಿಗಳು ಹಾಜರಿದ್ದರು.