ಮೈಸೂರು: ಕರ್ನಾಟಕ ರತ್ನ ದಿ.ಪುನೀತ್ ರಾಜ್ ಕುಮಾರ್ ಅವರಿಗೆ ಮೈಸೂರು ವಿವಿ ಮರಣೋತ್ತರ ಗೌರವ ಡಾಕ್ಟರೇಟ್ ಪದವಿ ನೀಡಿದೆ.
ಪುನೀತ್ ಪರವಾಗಿ ಅವರ ಪತ್ನಿ ಅಶ್ವಿನಿ ಅವರು ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿ ದರು.ಈ ವೇಳೆ ಅವರು ಭಾವುಕರಾದರು.
ನಟ ಪುನೀತ್ ರಾಜ್‍ಕುಮಾರ್ ಅವರ ಹೆಸರು ಹೇಳುತ್ತಿದ್ದಂತೆ ಇಡೀ ಸಭಾಂಗಣದಲ್ಲಿ ಚಪ್ಪಾಳೆ ಶಿಳ್ಳೆ ಸದ್ದು ಕೇಳಿ ಬಂದಿತು.
ಎಲ್ ಇಡಿ ಸ್ಕ್ರೀನ್ ನಲ್ಲಿ ಪುನೀತ್ ಅವರು ಅಭಿನಯಿಸಿದ ಹಲವು ಚಿತ್ರಗಳ ತುಣುಕು ಪ್ರದರ್ಶಿಸಲಾಯಿತು.
ಪ್ರೊ.ಜಿ.ಹೇಮಂತ್ ಕುಮಾರ್ ಅವರು ಪುನೀತ್ ಬಾಲ್ಯದಲ್ಲಿ ನಟಿಸಿದ ಸಿನಿಮಾಗಳು, ಅವರ ಕುಟುಂಬದ ಕುರಿತು ವಿವರ ನೀಡಿದರು.
ಈ ಹಿಂದೆ ಪದ್ಮಭೂಷಣ ಡಾ.ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು 46 ವರ್ಷಗಳ ಹಿಂದೆ ಮೈಸೂರು ವಿವಿ ನೀಡಿತ್ತು ಎಂಬುದು ಇಲ್ಲಿ ಸ್ಮರಣೀಯ.
ಇದೇ ವೇಳೆ ಜಾನಪದ ಗಾಯಕ ಮಳವಳ್ಳಿ ಮಹಾದೇವಸ್ವಾಮಿ, ಹಿರಿಯ ವಿಜ್ಞಾನಿ,ಡಾ.ವಾಸುದೇವ್ ಕಲ್ಕುಂಟೆ ಅತ್ರೆ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದ 102ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.
ಮೈಸೂರಿನ ಕ್ರಾಫರ್ಡ್ ಹಾಲ್ ನಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಮೂವರು ಸಾಧಕರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಿದರು.
ಮೊದಲಿಗೆ ಹಿರಿಯ ವಿಜ್ಞಾನಿ ಹಾಗೂ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ವಿಶ್ರಾಂತ ಮಹಾ ನಿರ್ದೇಶಕ ಡಾ.ವಾಸುದೇವ್ ಕಲ್ಕುಂಟೆ ಅತ್ರೆ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
ನಂತರ ಜಾನಪದ ಮಹಾನ್ ಕಲಾವಿದ ಜಾನಪದ ಗಾಯಕ ಮಳವಳ್ಳಿ ಮಹಾದೇವಸ್ವಾಮಿ ಅವರಿಗೂ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
ಸಮಾರಂಭದಲ್ಲಿ ರಾಷ್ಟ್ರೀಯ ಮೌಲ್ಯಾಂಕ ಮತ್ತು ಮಾನ್ಯತಾ ಪರಿಷತ್ತಿನ ನಿರ್ದೇಶಕ ಡಾ.ಎಸ್.ಸಿ.ಶರ್ಮ, ಕುಲಸಚಿವ ಪ್ರೊ.ಆರ್.ಶಿವಪ್ಪ, ಎ.ಪಿ.ಜ್ಞಾನಪ್ರಕಾಶ್ ಮತ್ತಿತರರು ಹಾಜರಿದ್ದರು.

