ಹಿಜಾಬ್ ತೀರ್ಪು ನೀಡಿದ್ದ ನ್ಯಾಯಾಧೀಶರಿಗೆ ಬೆದರಿಕೆ: ಮತ್ತೊಬ್ಬನ ಬಂಧನ

ಬೆಂಗಳೂರು: ಹಿಜಾಬ್ ಪ್ರಕರಣದ ತೀರ್ಪು ನೀಡಿದ್ದ ಹೈಕೋರ್ಟ್ ನ್ಯಾಯಾಧೀಶರಿಗೆ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ತಮಿಳುನಾಡಿನ ತಾಂಜಾವೂರ್ ನಲ್ಲಿ ಜಮಾಲ್ ಮಹಮದ್ ಉಸ್ಮಾನಿ ಎಂಬಾತನನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆ ತರಲಾಗಿದೆ. ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿತ್ತು ಎಂದು ಹೇಳಿದರು.

ಇದರಲ್ಲಿ ಇನ್ನೂ ಕೆಲವರು ಇದ್ದಾರೆ ಎಂಬ ಶಂಕೆ ಹಿನ್ನೆಲೆಯಲ್ಲಿ ಜಮಾಲ್‍ ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ತನಿಖೆ ನಂತರ ಸತ್ಯಾಸತ್ಯತೆ ಹೊರಬರಲಿದೆ ಎಂದು ತಿಳಿಸಿದರು.

ನ್ಯಾಯಾಧೀಶರಿಗೆ ಬೆದರಿಕೆ ಒಡ್ಡಿದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದರ ಹಿಂದೆ ಯಾರೇ ಇದ್ದರೂ ಬಿಡುವುದಿಲ್ಲ. ಕಾನೂನಿನ ಪ್ರಕಾರವೇ ಅವರಿಗೆ ಶಿಕ್ಷೆ ನೀಡಲಿದ್ದೇವೆ ಎಂದು ಆರಗ ಜ್ಞಾನೇಂದ್ರ ತಿಳಿಸಿದರು.