ಅಂಜನಾದ್ರಿ ಕ್ಷೇತ್ರ ಅಭಿವೃದ್ಧಿ -ಸಿಎಂ ಭರವಸೆ

ಬೆಂಗಳೂರು: ಹನುಮನ ಜನ್ಮಸ್ಥಳ ಹಂಪಿ ಬಳಿ ಇರುವ ಅಂಜನಾದ್ರಿ  ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದ್ದು,  ಬಜೆಟ್‍ನಲ್ಲಿ 100 ಕೋಟಿ ರೂ ಅನುದಾನ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶ್ರೀ ರಾಮಸೇವಾ ಮಂಡಳಿ ಆಯೋಜಿಸಿರುವ ಸಂಗೀತೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇದೇ ವರ್ಷ ಯೋಜನೆ ಸಿದ್ದಪಡಿಸಿ ಅಭಿವೃದ್ಧಿ ಕಾಮಗಾರಿಯನ್ನು ಆರಂಭಿಸಲಾಗುವುದು. ಅಂಜನಾದ್ರಿ ಬೆಟ್ಟದ ಅಭಿವೃದ್ಧಿಯ ಕೆಲಸ ಈ ವರ್ಷವೇ ಪ್ರಾರಂಭವಾಗಲಿದೆ ಎಂದು ಹೇಳಿದರು.

ಈ ವಿಶಿಷ್ಟವಾದ ಅಭಿವೃದ್ಧಿ ಕಾರ್ಯಕ್ರಮವನ್ನು ಪ್ರಮುಖರ ಸಲಹೆ ಮೇರೆಗೆ ತೆಗೆದುಕೊಳ್ಳಲು ತೀರ್ಮಾನಿಸಿದೆ. ಇನ್ ಫೋಸಿಸ್  ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರಿಗೆ ತಿಳಿದಿರುವ ತಜ್ಞರ ಹೆಸರುಗಳನ್ನು ಒದಗಿಸಲು ಮನವಿ ಮಾಡಲಾಗಿದೆ.

ಶ್ರೀ ರಾಮ ಸೇವಾ ಮಂಡಳಿಯವರು ಸ್ಥಾಪಿಸಲು ಉದ್ದೇಶಿಸಿರುವ ಕಲಾ ಸಾಕೇತ್ ಸ್ಥಾಪನೆಗೆ ಸರ್ಕಾರ ನೆರವು ಒದಗಿಸಲಿದೆ ಎಂದು ಭರವಸೆ ನೀಡಿದರು.

ಪ್ರತಿಶಬ್ಧಕ್ಕೂ ತನ್ನದೇ ರಾಗತಾಳವಿರುತ್ತದೆ. ಸಂಗೀತ ಮನುಷ್ಯನ ಉತ್ಸಾಹ, ಆನಂದ, ಸಮಾಧಾನ, ಭಾವನೆಗಳನ್ನು ಅಭಿವ್ಯಕ್ತಿ ಪಡಿಸುವ ಮಾಧ್ಯಮವೂ ಹೌದು. ದಣಿದಾಗ ಸಂಗೀತ ಕೇಳಿದರೆ ಆಹ್ಲಾದ ಉಂಟಾಗುತ್ತದೆ ಎಂದು ಸಿಎಂ ಬಣ್ಣಿಸಿದರು.