ಸಚಿವ ಸಂಪುಟ ವಿಸ್ತರಣೆ ಸಧ್ಯಕ್ಕಿಲ್ಲ

ನವದೆಹಲಿ: ಬಿಜೆಪಿ ಕಾರ್ಯಕಾರಿಣಿ ಸಭೆಯ ನಂತರ ಸಚಿವ ಸಂಪುಟ ವಿಸ್ತರಣೆ ಇಲ್ಲವೆ ಪುನಾರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಸಿಎಂ, ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.

ಇದೇ 16 ಮತ್ತು 17ರಂದು ಪಕ್ಷದ ಕಾರ್ಯಕಾರಿಣಿ ಸಭೆ ನಡೆಯಲಿದೆ. ಅಲ್ಲಿ ಎಲ್ಲ ವಿಷಯಗಳ ಬಗ್ಗೆಯೂ ಸ್ಥೂಲವಾಗಿ ಚರ್ಚಿಸಿ ನಂತರ ಅಂತಿಮವಾಗಿ ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂಬುದು ಖಾತ್ರಿಯಾಗಲಿದೆ ಎಂದು ತಿಳಿಸಿದರು.

ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರ ಜತೆ ಚರ್ಚೆ ಮಾಡಲಾಗಿದೆ. ನಾನು ಕಾರ್ಯಕಾರಿಣಿ ಸಭೆಗೆ ಆಗಮಿಸಿ ಅಲ್ಲಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹಾಗೂ ರಾಜ್ಯ ನಾಯಕರ ಜತೆ ಚರ್ಚಿಸಿದ ನಂತರ ದಿನಾಂಕವನ್ನು ತಿಳಿಸುವುದಾಗಿ ಹೇಳಿದ್ದಾರೆ ಎಂದು ಮಾಹಿತಿ ನೀಡಿದರು.

ಸಂಪುಟ ವಿಸ್ತರಣೆ ಕುರಿತಂತೆ ನಾನು  ಅಧ್ಯಕ್ಷರಿಗೆ ಮನವರಿಕೆ ಮಾಡಿದ್ದೇನೆ. ಮುಂಬರುವ 2023ರ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಬೇರುಮಟ್ಟದಿಂದ ಸಂಘಟಿಸುವಂತೆ ಸಲಹೆ ನೀಡಿದ್ದಾರೆ.

ಈ ಬಾರಿಯ ದೆಹಲಿ ಭೇಟಿ ಯಶಸ್ವಿಯಾಗಿದೆ. ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚಿಸಲು ನಾನು ಆಗಮಿಸಿದ್ದೆ. ನಮಗೆ ಎಲ್ಲ ಸಚಿವರಿಂದಲೂ ಸಕಾರಾತ್ಮಕವಾದ ಭರವಸೆ ಸಿಕ್ಕಿದೆ ಎಂದು ಸಿಎಂ ಸಂತಸ ವ್ಯಕ್ತಪಡಿಸಿದರು.

ರಾಜ್ಯಕ್ಕೆ ಬರಬೇಕಾಗಿರುವ ಜಿಎಸ್‍ಟಿ ಬಾಕಿ ಅನುದಾನ, ರೈಲ್ವೆ ಯೋಜನೆಗಳು, ನೀರಾವರಿ, ರಕ್ಷಣೆ, ಪರಿಸರ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.