ಮೈಸೂರು: ಜಿಹಾದಿಗಳಿಗೆ ಬೆಂಬಲ ವ್ಯಕ್ತಪಡಿಸಿದರೆ ಅಧಿಕಾರಕ್ಕೆ ಬರಬಹುದು ಎಂದು ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ಅಂದುಕೊಂಡಿದ್ದಾರೆ, ಆದರೆ ಅದು ಸಾಧ್ಯವಾಗದು ಎಂದು ಸಂಸದ ಪ್ರತಾಪ್ ಸಿಂಹ ವ್ಯಂಗ್ಯ ವಾಡಿದರು
ಮೈಸೂರಿನಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು,
ಜಿಹಾದಿಗಳಿಗೆ ಸಿದ್ದರಾಮಯ್ಯ ಬೆಂಬಲ ವ್ಯಕ್ತಪಡಿಸುವವರೆಗೂ ರಾಜ್ಯದಲ್ಲಿ ಈಗ ನಡೆಯುತ್ತಿರುವ ಘಟನೆಗಳು ನಡೆಯುತ್ತಲೇ ಇರುತ್ತವೆ ಎಂದು ಹೇಳಿದರು.
ರಾಜ್ಯ ಹಾಗೂ ದೇಶದಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಅವರೇ ಕಾರಣ. ಹಿಜಾಬ್ ಕುರಿತು ನ್ಯಾಯಾಲಯ ತೀರ್ಪು ನೀಡಿದಾಗ ಸಿದ್ದರಾಮಯ್ಯ ನ್ಯಾಯಾಲಯದ ತೀರ್ಪಿನ ವಿರುದ್ಧ ಯಾವುದೇ ರೀತಿಯಲ್ಲಿ ಪ್ರತಿಭಟನೆ ಮಾಡಬೇಡಿ ಎಂದಿದ್ದರೆ ಈ ಪರಿಸ್ಥಿತಿ ಉಂಟಾಗುತ್ತಿರಲಿಲ್ಲ ಎಂದು ದೂರಿದರು.
ಹಿಂದುಗಳು ಕೇವಲ ಪ್ರತಿಕ್ರಿಯಿಸುತ್ತಾರೆ. ಆದರೆ ಅವರು ಎಲ್ಲದಕ್ಕೂ ದಾಳಿ ಮಾಡುತ್ತಾರೆ. ಇದು ತಪ್ಪಲ್ಲವೇ ಎಂದು ಪ್ರಶ್ನಿಸಿದರು.
ಭಾರತೀಯ ಭಾಷಾ ಸಂಸ್ಥೆ ನಿರ್ಮಾಣಕ್ಕೆ ಕ್ರಮ: ಮೈಸೂರು ವಿಶ್ವವಿದ್ಯಾಲಯದ ಆವರಣದಲ್ಲಿರುವ ಜಯಲಕ್ಷ್ಮಿ ವಿಲಾಸ್ ಪ್ಯಾಲೇಸ್‍ನಲ್ಲಿ ಭಾರತೀಯ ಭಾಷಾ ಸಂಸ್ಥೆ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಇದೇ ವೇಳೆ ಪ್ರತಾಪ್ ಸಿಂಹ ತಿಳಿಸಿದರು.
ಕಳೆದ 7 ವರ್ಷಗಳಿಂದ ಈ ಕಾರ್ಯ ನಡೆದಿಲ್ಲ ಹಾಗಾಗಿ ಮುಖ್ಯಮಂತ್ರಿಗಳಿಗೆ ಈ ಕುರಿತು ವಿಷಯ ತಿಳಿಸಿ ಜಯಲಕ್ಷ್ಮಿ ವಿಲಾಸ್‍ನಲ್ಲಿ ಸ್ಥಳಾವಕಾಶ ಕಲ್ಪಿಸಿಕೊಡಲು ಮನವಿ ಮಾಡಲಾಗಿದೆ ಎಂದು ಹೇಳಿದರು.
ಇದಕ್ಕೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ, ಏ.13ರಂದು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಪರಿಶೀಲನೆ ನಡೆಸಲಿದ್ದು, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

