ಬೆಂಗಳೂರು: ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡು ಒಂದೇ ತಾಯಿಯ ಮಕ್ಕಳಂತೆ ಇರುವ ರಾಜ್ಯಗಳ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಹಿಂದಿ ಹೇರಿಕೆ ಬಗ್ಗೆ ಹೇಳಿಕೆ ನೀಡಿ ಹುಳಿ ಹಿಂಡಿದ್ದಾರೆ ಎಂದು ಮಾಜಿ ಸಿಎಂ ಹೆಚ್. ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ಪ್ರತಿಯೊಂದಕ್ಕೂ ಹಿಂದುತ್ವದ ಜಪ ಮಾಡಿ ಭಾವನಾತ್ಮಕ ವಿಷಯಗಳನ್ನು ಮುನ್ನೆಲೆಗೆ ತಂದು ಸಮಾಜ ಮತ್ತು ಜನರನ್ನು ಒಡೆಯುತ್ತಿರುವ ಬಿಜೆಪಿ, ಈಗ ಭಾಷೆಯನ್ನೂ ಟೂಲ್ ಕಿಟ್ ಮಾಡಿಕೊಂಡು ವಿಭಜನೆಗೆ ಹೊರಟಿರುವುದು ದೇಶಕ್ಕೆ ಗಂಡಾಂತರಕಾರಿ ಎಂದು ಟ್ವಿಟರ್ ನಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
ಬ್ರಿಟಿಷರು ಪ್ರತಿ ಸಂಸ್ಥಾನವನ್ನು ಆಕ್ರಮಿಸಿಕೊಳ್ಳುವ ಮುನ್ನ ಒಡೆದು ಆಳುವ ನೀತಿ ಅನುಸರಿಸುತ್ತಿದ್ದರು. ಈಗ ಬಿಜೆಪಿ ಅದೇ ನೀತಿ ಮುಂದುವರೆಸಿದ್ದು, ಬ್ರಿಟೀಷರಿಗೂ ಮತ್ತು ಬಿಜೆಪಿಗೆ ಯಾವುದೇ ವ್ಯತ್ಯಾಸ ಇಲ್ಲ ಎನ್ನುವುದಕ್ಕೆ ಇದಿ ಸಾಕ್ಷಿ ಎಂದು ಆರೋಪಿಸಿದ್ದಾರೆ.
ಅಮಿತ್ ಶಾ ಅವರಿಗೆ ಇಂಗ್ಲಿಷ್ ಬರಲ್ವಾ ಅವರಿಗೆ ಪ್ರಾದೇಶಿಕ ಭಾಷೆಗಳ ಮೇಲೆ ಯಾಕೆ ಈ ಪರಿ ದ್ವೇಷ. ನಮ್ಮ ಭಾಷೆ ನಮಗೆ ಮುಖ್ಯ. ಮಾತೃಭಾಷೆಗೇ ಅಗ್ರಸ್ಥಾನ. ಹಿಂದಿ ಹೇರಿಕೆ ವಿರುದ್ದ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲ ಇದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

