ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ.
ಗುತ್ತಿಗೆದಾರ ಸಂತೊಷ್ ಪಾಟೀಲ್ ಸಚಿವ ಈಶ್ವರಪ್ಪ ಅವರ ಮೇಲೆ ಶೇ.40 ಕಮಿಷನ್ ಆರೋಪ ಹೊರಿಸಿದ್ದರು.
ಕಾಂಗ್ರೆಸ್ ಪಕ್ಷದ ನಾಯಕರು ಸತತ ಹೋರಾಟ ನಡೆಸಿ ಈಶ್ವರಪ್ಪ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ.
ಪಕ್ಷದ ಹಿತದೃಷ್ಟಿಯಿಂದ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.
ಶುಕ್ರವಾರ ಸಂಜೆಯೊಳಗೆ ಮುಖ್ಯ ಮಂತ್ರಿಗಳನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ತನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ ಎಂದು ಬರೆದಿಟ್ಟಿದ್ದರೆಂದು ಹೇಳಲಾಗುತ್ತಿದೆ.
ಆರೋಪ ಇರುವುದರಿಂದ ಪಕ್ಷಕ್ಕೆ ಮುಜುಗರವಾಗಬಾರದೆಂಬ ಕಾರಣಕ್ಕೆ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ಈಶ್ವರಪ್ಪ ಪ್ರಕಟಿಸಿದ್ದಾರೆ.

