ಬೆಂಗಳೂರು: ಹುಬ್ಬಳ್ಳಿ ಗಲಭೆಯಲ್ಲಿ ಯಾರೇ ಭಾಗಿಯಾಗಿದ್ದರೂ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಸಿಎಂ,
ಘಟನೆ ಸಂಬಂಧ ಈಗಾಗಲೇ ಪೊಲೀಸರು ಅನೇಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಈಗ ಬಂಧನಕ್ಕೆ ಒಳಗಾಗಿರವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದು ಶತಸಿದ್ದ ಎಂದು ಹೇಳಿದರು.
ಘಟನೆ ಸಂಬಂಧ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಿ ತಪ್ಪಿತಸ್ಥರು ಯಾರೇ ಇದ್ದರೂ ಕಾನೂನು ಪ್ರಕಾರವೇ ಕ್ರಮ ಜರುಗಿಸುತ್ತೇವೆ ಎಂದರು.
ಈಗಾಗಲೇ ಪೊಲೀಸರು ತನಿಖಾ ತಂಡವನ್ನು ರಚಿಸಿ ತಲೆಮರೆಸಿಕೊಂಡಿರುವ ಆರೋಪಿಗಳಿಗೆ ಬಲೆ ಬೀಸಿದ್ದಾರೆ.
ಪೊಲೀಸ್ ಸಬ್‍ಇನ್‍ಸ್ಪೆಕ್ಟರ್ (ಪಿಎಸ್‍ಐ) ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಕುರಿತು ಸಿಐಡಿ ಪೊಲೀಸರು ಮುಕ್ತವಾಗಿ ತನಿಖೆ ನಡೆಸಲಿದ್ದಾರೆ ಎಂದು ಇದೇ ವೇಳೆ ಬೊಮ್ಮಾಯಿ ತಿಳಿಸಿದರು.
ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಸುಳಿವು ಗೊತ್ತಾಗುತ್ತಿದ್ದಂತೆ ಗೃಹ ಸಚಿವರು ಇದನ್ನು ಸಿಐಡಿಗೆ ಹಸ್ತಾಂತರ ಮಾಡಿದ್ದಾರೆ.
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ. ತನಿಖೆಯಲ್ಲಿ ಸರ್ಕಾರ ಎಲ್ಲಿಯೂ ಕೂಡ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.
ನಿಷ್ಪಕ್ಷಪಾತವಾಗಿ ತನಿಖೆಯಾಗಬೇಕೆಂದು ಸರ್ಕಾರವೇ ಸಿಐಡಿಗೆ ಹಸ್ತಾಂತರ ಮಾಡಿದೆ. ಸಮಗ್ರವಾಗಿ ತನಿಖೆ ನಡೆಸುತ್ತೇವೆ. ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದರು.
ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ದೆಹಲಿಗೆ ಹೋದ ನಂತರ ಸಭೆ ಮಾಡಿ ತಿಳಿಸುತ್ತೇವೆ ಅಮೇಲೆ ನೀವು ಬನ್ನಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ತಿಳಿಸಿದ್ದಾರೆ
ಪುನಾರಚನೆಯೋ ಅಥಾವ ವಿಸ್ತರಣೆಯೋ ಎಲ್ಲವೂ ದೆಹಲಿಯಲ್ಲಿಯೇ ತೀರ್ಮಾನವಾಗುತ್ತದೆ ಎಂದು ಸ್ಪಷ್ಟಪಡಿಸಿದರು.

