ಬೆಂಗಳೂರು: ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಅವರು ಮಾತನಾಡಿದರು.
ಈಗಾಗಲೇ ಸಿಐಡಿ ತನಿಖಾ ತಂಡದಿಂದ ಬಂಧನಕ್ಕೆ ಒಳಗಾಗಿರುವವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಜಾಮೀನು ಪಡೆಯಬಹುದು. ಭವಿಷ್ಯದಲ್ಲಿ ಇಂತಹ ಪ್ರಕರಣಗಳು ಮರುಕಳಿಸಬಾರದು ಹಾಗಾಗಿ ಕೋಕಾ ಕಾಯ್ದೆ ಜಾರಿಗೊಳಿಸುವ ಬಗ್ಗೆ ಚಿಂತನೆ ಮಾಡಲಾಗಿದೆ ಎಂದು ತಿಳಿಸಿದರು.
ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸದಿದ್ದರೆ ಅಮಾಯಕರ ಭವಿಷ್ಯ ಹಾಳಾಗುತ್ತದೆ ಎಂದರು.
ಅಕ್ರಮ ಎಸಗದಿವರು ಯಾರೇ ಇರಲಿ, ಯಾವುದೇ ಪಕ್ಷಕ್ಕೆ ಸೇರಿರಲಿ. ಅವರ ವಿರುದ್ಧ ಕಠಿಣ ಕಾನೂನು ಕ್ರಮ ಆಗಬೇಕೆಂಬುದು ಎಲ್ಲರ ಒತ್ತಾಯವಾಗಿದೆ.ತಪ್ಪಿತಸ್ಥರು ಯಾರೇ ಇದ್ದರೂ ಖಂಡಿತ ಶಿಕ್ಷೆ ನೀಡುತ್ತೇವೆ ಎಂದು ಎಚ್ಚರಿಸಿದರು.
ಪ್ರಕರಣದ ಪ್ರಮುಖ ಆರೋಪಿ ದಿವ್ಯ ಹಾಗರಗಿ ಹಾಗೂ ಇತರರನ್ನು ಬಂಧಿಸುವುದರಲ್ಲಿ ಸ್ವಲ್ಪ ತಡವಾಗಿರಬಹುದು. ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿಯೇ ಸಿಐಡಿ ಅವರು ಬಂಧಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಹಿಂದೆ ನಡೆದ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳಲ್ಲಿ ದಿವ್ಯ ಹಾಗರಗಿ ಹಾಗೂ ಇತರರು ಭಾಗಿಯಾಗಿದ್ದರೆ ಎಂಬ ಬಗ್ಗೆಯೂ ತನಿಖೆ ಮಾಡಲಾಗುವುದು. ಸಿಐಡಿ ಎಲ್ಲ ದಾಖಲೆಗಳನ್ನು ಸಂಗ್ರಹಿಸುತ್ತಿದೆ.
ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಹೀಗಾಗಿ ಸಿಐಡಿ ತಂಡಕ್ಕೆ ಮುಕ್ತ ಸ್ವಾತಂತ್ರ್ಯ ನೀಡಿದ್ದರಿಂದ ನಿಷ್ಪಕ್ಷಪಾತ ತನಿಖೆ ನಡೆಯುತ್ತಿದೆ. ಇದರಲ್ಲಿ ಯಾರನ್ನೋ ರಕ್ಷಣೆ ಮಾಡಿ ಇನ್ನಾರನ್ನೋ ಆರೋಪಿ ಸ್ಥಾನದಲ್ಲಿ ಕೂರಿಸುವ ಕೆಲಸ ಮಾಡುವುದಿಲ್ಲ ಎಂದು ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದರು.

