ಅಶ್ವಥ್ ನಾರಾಯಣ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಹಿಟ್ ಅಂಡ್ ರನ್ ಕೇಸ್ -ಸಿಎಂ

ಬೆಂಗಳೂರು: ಪಿಎಸ್‍ಐ ನೇಮಕಾತಿ ಪ್ರಕರಣದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ವಿರುದ್ಧ ಕಾಂಗ್ರೆಸ್ ಪಕ್ಷದವರು ಹಿಟ್ ಅಂಡ್ ರನ್ ಕೇಸ್ ಮಾಡುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕೃತ ಪ್ರತಿಪಕ್ಷವಾಗಿ ಒಬ್ಬರ ಮೇಲೆ ಆರೋಪ ಮಾಡುವಾಗ ಸಾಕ್ಷ್ಯಾಧಾರಗಳನ್ನು ಒದಗಿಸಬೇಕು. ಸುಮ್ಮನೆ ಹಿಟ್ ಅಂಡ್ ರನ್ ಕೇಸ್ ಮಾಡಬಾರದು ಎಂದು ಹೇಳಿದರು.

ಸಚಿವರ ವಿರುದ್ಧ ಮಾಡುತ್ತಿರುವ ಆರೋಪಗಳಿಗೆ ಸಾಕ್ಷ್ಯಾಧಾರಗಳಾದರೂ ಇವೆಯೇ, ಸುಮ್ಮನೆ ಸುದ್ದಿಗಾಗಿ ಆರೋಪ ಮಾಡಿದರೆ ಜನರು ನಂಬುತ್ತಾರೆಯೇ ಎಂದು ಪ್ರಶ್ನಿಸಿದರು.

ಕಾಂಗ್ರೆಸ್  ಅವಧಿಯಲ್ಲಿ ಎಷ್ಟು ಅಕ್ರಮಗಳು ನಡೆದಿವೆ ಎಂಬುದು ಅವರಿಗೆ ಗೊತ್ತಿಲ್ಲವೇ. ಪಿಎಸ್‍ಐ ನೇಮಕಾತಿ, ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಸಾಲು ಸಾಲು ಹಗರಣಗಳು ನಡೆದವು. ನಮ್ಮ ಸರ್ಕಾರದ ಬಗ್ಗೆ ಮಾತನಾಡಲು ಅವರಿಗೆ ಏನು ನೈತಿಕತೆ ಇಲ್ಲ ಎಂದು ಕಿಡಿಕಾರಿದರು.

ಕಾಂಗ್ರೆಸ್ ಪಕ್ಷದ ಅನೇಕ ನಾಯಕರು ಸಿಕ್ಕಿ ಹಾಕಿಕೊಂಡಿದ್ದಾರೆ. ತಮ್ಮ ಬಣ್ಣ ಎಲ್ಲಿ ಬಯಲಾಗುತ್ತದೋ ಎಂಬ ಅಳುಕಿನಿಂದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಸಿಎಂ ಟೀಕಿಸಿದರು.

ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ಬಿಡುವುದಿಲ್ಲ. ದಿವ್ಯಾ ಹಾಗರಗಿ ಸೇರಿದಂತೆ ಇನ್ನು ಕೆಲವರು ಸಿಕ್ಕಿ ಬಿದ್ದಿದ್ದಾರೆ. ಈ ಪ್ರಕರಣವನ್ನು ನಿಷ್ಪಕ್ಷಪಾತ ಮತ್ತು ನಿಷ್ಠುರವಾಗಿ ತನಿಖೆ ನಡೆಸಬೇಕೆಂದು ಅಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ ಎಂದು ತಿಳಿಸಿದರು.

ಬಜೆಟ್‍ನಲ್ಲಿ ಘೋಷಣೆ ಮಾಡಿರುವ ಕಾರ್ಯಕ್ರಮಗಳನ್ನು ಕಾಲಮಿತಿಯೊಳಗೆ ಅನುಷ್ಠಾನಗೊಳಿಸುವಂತೆ ಅಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಇದೇ ವೇಳೆ ಬೊಮ್ಮಾಯಿ ತಿಳಿಸಿದರು.