ಬೆಂಗಳೂರು: ಉದ್ದೇಶಪೂರ್ವಕವಾಗಿ ಕೆಲವರು ಆಜಾನ್ ವಿಚಾರವನ್ನು ಕೆದಕಿ, ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಇದು ಸರ್ಕಾರದ ವೈಫಲ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.
ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು,ಈ ಸಂಘರ್ಷವನ್ನು ನಿಯಂತ್ರಿಸದಿದ್ದರೆ ರಾಜ್ಯದಲ್ಲಿ ಅಶಾಂತಿ, ಕೋಮು ಸಂಘರ್ಷ ಹೆಚ್ಚುತ್ತದೆ ಎಂದು ಹೇಳಿದರು.
ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.
ಆಜಾನ್ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಈಗಾಗಲೇ ತೀರ್ಮಾನ ಮಾಡಿದೆ. ಪೊಲೀಸ್ ನವರು ಕೂಡ ನೊಟೀಸ್ ಜಾರಿ ಮಾಡಿದ್ದಾರೆ.
ನಮ್ಮ ಪಕ್ಷದ ನಾಯಕರ ತಂಡ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವುದು ಮುಖ್ಯಮಂತ್ರಿಗಳ ಜವಾಬ್ದಾರಿ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಮತ್ತೊಂದು ಕೋಮುಗಲಭೆಗೆ ಸಿದ್ಧತೆ ನಡೆದಿತ್ತು ಎಂದು ಹೇಳಲಾಗಿದೆಯಲ್ಲ ಎಂಬ ಪ್ರಶ್ನೆಗೆ ಈ ವಿಚಾರದಲ್ಲಿ ಕ್ರಮ ಕೈಗೊಳ್ಳುವುದು ಪೊಲೀಸರ ಕರ್ತವ್ಯ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಮಾಹಿತಿ ಪಡೆದ ನಂತರ ಮಾತನಾಡುತ್ತೇನೆ ಎಂದು ಡಿಕೆಶಿ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಕಾಂಗ್ರೆಸ್ ಅಜೆಂಡಾ ಭ್ರಷ್ಟಾಚಾರ ಹಾಗೂ ಭಯೋತ್ಪಾದನೆ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು,ದಿನ ಬೆಳಗಾದರೆ ಸರ್ಕಾರದ ಅಕ್ರಮ, ಭ್ರಷ್ಟಾಚಾರಗಳು ಬೆಳಕಿಗೆ ಬರುತ್ತಿವೆಯಲ್ಲ ಎಂದರು.
ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ಬಿಜೆಪಿಯವರಿಗೆ ಮುಖ ತೋರಲು ಆಗುತ್ತಿಲ್ಲ. ಜನ ಹಾದಿ-ಬೀದಿಯಲ್ಲಿ ಉಗಿಯುತ್ತಿದ್ದು, ಮೊದಲು ಅವರು ತಮ್ಮ ಮುಖವನ್ನು ತೊಳೆದುಕೊಳ್ಳಲಿ. ನಂತರ ನಮ್ಮ ಬಗ್ಗೆ ಮಾತನಾಡಲಿ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದಲ್ಲಿ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ನಡುವೆ ಹೊಂದಾಣಿಕೆ ಇಲ್ಲ ಎಂಬ ಕಟೀಲ್ ಹೇಳಿಕೆಗೆ ಅವರ ಪಕ್ಷದಲ್ಲಿ ಆಂತರಿಕ ಕಚ್ಛಾಟ, ಮಂತ್ರಿ ಬದಲಾವಣೆ, ನಾಯಕತ್ವ ಬದಲಾವಣೆ ಸೇರಿದಂತೆ ಅನೇಕ ಹುಳುಕುಗಳಿವೆ. ಮೊದಲು ಅವುಗಳನ್ನು ಸರಿಮಾಡಿಕೊಳ್ಳಲಿ ಎಂದು ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದರು.

