ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಿದ ನಂತರವೇ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ಈವರೆಗೂ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಸಂವಿಧಾನದ ಅಡಿ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ನೀಡಲಾಗುತ್ತಿತ್ತು. ನಮ್ಮ ಸರ್ಕಾರ ಕೂಡಾ ಮೀಸಲಾತಿ ಕಲ್ಪಿಸಿಯೇ ಚುನಾವಣೆ ನಡೆಸುತ್ತದೆ ಯಾವುದೇ ಗೊಂದಲ ಬೇಡ ಎಂದು ಹೇಳಿದರು.
ಮೀಸಲಾತಿ ನೀಡುವ ಸಂಬಂಧ ಸುಪ್ರೀಂಕೋರ್ಟ್ ಆದೇಶ, ಹಿಂದುಳಿದ ವರ್ಗಗಳ ಆಯೋಗ ಹಾಗೂ ಬೇರೆ ಬೇರೆ ಸಮಿತಿಯ ಶಿಫಾರಸುಗಳು ಎಲ್ಲವನ್ನು ಅಧ್ಯಯನ ಮಾಡಿ ಯಾರಿಗೂ ಅನ್ಯಾಯವಾಗದಂತೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.
ಕಾನೂನು ತಜ್ಞರು, ಅಡ್ವೋಕೇಟ್ ಜನರಲ್ ಜತೆ ಸಭೆ ನಡೆಸಲಾಗುವುದು. ಅವರು ಕೊಡುವ ಸಲಹೆಗಳನ್ನು ನೋಡಿಕೊಂಡು ಸರ್ಕಾರ ಮುಂದಿನ ಹೆಜ್ಜೆ ಇಡಲಿದೆ.
ಸಂವಿಧಾನ ನೀಡಿರುವ ಮೀಸಲಾತಿಯನ್ನು ಯಾರಿಗೂ ಮೊಟಕುಗೊಳಿಸುವುದಿಲ್ಲ ಎಂದು ಸಿಎಂ ಹೇಳಿದರು.
ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವ ಕುರಿತು ಮಧ್ಯ ಪ್ರದೇಶ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯ ಆದೇಶ ಕೊಟ್ಟಿದೆ.
ಇದು ಆ ಒಂದು ರಾಜ್ಯಕ್ಕೆ ಮಾತ್ರ ಅನ್ವಯವಾಗುತ್ತದೆಯೋ ಇಲ್ಲವೇ ದೇಶದ ಎಲ್ಲಾ ರಾಜ್ಯಗಳಿಗೂ ಅನ್ವಯವಾಗುತ್ತದೆಯೋ ಎಂಬುದರ ಬಗ್ಗೆ ಕಾನೂನು ತಜ್ಞರ ಜತೆ ಚರ್ಚಿಸಿ ಮಾಹಿತಿ ಪಡೆಯುತ್ತೇವೆ ಎಂದರು.
ವಾರ್ಡ್ ಪುನರ್‍ವಿಂಗಡಣೆ, ಮೀಸಲಾತಿ ನಿಗದಿ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಪ್ರಕ್ರಿಯೆಗಳನ್ನು ಆರಂಭಿಸಲು ಒಂದಿಷ್ಟು ಸಮಯವಕಾಶ ಬೇಕಾಗಬಹುದು. ಸರ್ಕಾರಕ್ಕೆ ಚುನಾವಣೆ ಮುಂದೂಡುವ ಉದ್ದೇಶವಿಲ್ಲ ಎಂದು ಬೊಮ್ಮಾಯಿ ತಿಳಿಸಿದರು

