ಬೆಂಗಳೂರು: ಬಿಜೆಪಿ ಸರ್ಕಾರ ಧಾರ್ಮಿಕ ಭಾವನೆ ಕೆರಳಿಸಿ ಜನರ ಗಮನ ಬೇರೆಡೆ ಸೆಳೆಯುವ ದುರುದ್ದೇಶದಿಂದ ಸುಗ್ರಿವಾಜ್ಞೆ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಗೊಳಿಸಲು ಹೊರಟಿದೆ ಎಂದು ವಿಪಕ್ಷ ನಾಯಕ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಅಲ್ಪಸಂಖ್ಯಾತ ಸಮುದಾಯವನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶದಿಂದ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿ ಮಾಡಲು ಮುಂದಾಗಿದ್ದು, ರಾಜ್ಯಪಾಲರು ಈ ಸುಗ್ರೀವಾಜ್ಞೆಯನ್ನು ತಿರಸ್ಕರಿಸಬೇಕೆಂದು ಮನವಿ ಮಾಡಿದ್ದಾರೆ.
ಆಮಿಷ,ಒತ್ತಡ, ಬೆದರಿಕೆಗಳ ಮೂಲಕ ನಡೆಯುವ ಬಲತ್ಕಾರದ ಮತಾಂತರಗಳನ್ನು ತಡೆಯಲು ನಮ್ಮ ಕಾನೂನು ಸಶಕ್ತವಾಗಿದೆ. ಹೀಗಿದ್ದಾಗ ಹೊಸ ಕಾಯ್ದೆಯ ಅವಶ್ಯಕತೆ ಏನಿದು ಎಂದು ಸಿದ್ದು ಪ್ರಶ್ನಿಸಿದ್ದಾರೆ.
ಸಹಬಾಳ್ವೆ-ಸೌಹಾರ್ದತಾ ಪರಂಪರೆಯ ಹಿಂದೂ ಧರ್ಮದ ನೈಜ ಅನುಯಾಯಿಗಳು ಯಾರೂ ಇಂತಹ ಅನಗತ್ಯ ಕಾಯ್ದೆಗೆ ಒತ್ತಾಯ ಮಾಡಿಲ್ಲ, ಇದನ್ನು ಒಪ್ಪುವುದೂ ಇಲ್ಲ. ಇದು ಸಂಘ ಪರಿವಾರದ ರಾಜಕೀಯ ಹಿಂದುತ್ವದ ಅಜೆಂಡಾ ಆಗಿದೆ. ಇದನ್ನು ಸಹೃದಯ ಹಿಂದು ಬಾಂಧವರು ಖಂಡಿಸಬೇಕು ಎಂದು ಕರೆ ನೀಡಿದ್ದಾರೆ.
ಕರ್ನಾಟಕದಲ್ಲಿ ಚರ್ಚ್ ಗಳ ಮೇಲೆ ನಡೆದಿರುವ ದಾಳಿಯಿಂದ ರಾಜ್ಯದ ಜನತೆ ತಲೆತಗ್ಗಿಸುವಂತಾಗಿದೆ. ತರಾತುರಿಯ ಮತಾಂತರ ನಿಷೇಧ ಕಾಯ್ದೆ ಇಂತಹ ದಾಳಿಗೆ ದುಷ್ಕರ್ಮಿಗಳ ಕೈಗೆ ನೀಡುವ ಆಯುಧವೇ ಬೊಮ್ಮಾಯಿಯವರೇ ಎಂದು ಸಿದ್ದು ಕಿಡಿಕಾರಿದ್ದಾರೆ.

