ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಳೆಯ ಪದ್ದತಿ ಅಥವಾ ಹೊಸದಾಗಿ ಒಬಿಸಿ ಮೀಸಲಾತಿ ನೀಡುವಂತೆ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವ ಕುರಿತು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಅದರಂತೆ ನಮ್ಮ ವಕೀಲರು ಅರ್ಜಿಯನ್ನು ಸಲ್ಲಿಕೆ ಮಾಡಲಿದ್ದಾರೆ ಎಂದು ತಿಳಿಸಿದರು.
ಬಿಬಿಎಂಪಿ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆಯಲ್ಲಿ ಓಬಿಸಿಯವರಿಗೆ ಮೀಸಲಾತಿ ನೀಡದೆ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂಬ ಅಭಿಪ್ರಾಯವನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಲಿದ್ದೇವೆ ಎಂದು ಹೇಳಿದರು.
ಹಾಲಿ ಇರುವ ಹಳೇ ಮೀಸಲಾತಿಯಲ್ಲಾಗಲಿ ಇಲ್ಲವೇ ಹೊಸದಾಗಿ ಮೀಸಲಾತಿ ಕಲ್ಪಿಸಲು ಅವಕಾಶ ನೀಡಬೇಕೆಂದು ಮನವಿ ಮಾಡುತ್ತೇವೆ. ನ್ಯಾಯಾಲಯ ನಮ್ಮ ಮನವಿಯನ್ನು ಪರಿಗಣಿಸಲಿದೆ ಎಂಬ ವಿಶ್ವಾಸವಿದೆ ಎಂದರು.
ಓಬಿಸಿಗಳಿಗೆ ಮೀಸಲಾತಿ ಕೊಡುವ ಸಂಬಂಧ ಆಯೋಗಗಳು ಮತ್ತು ಸಮಿತಿ ನೀಡಿರುವ ಶಿಫಾರಸ್ಸನ್ನು ನ್ಯಾಯಾಲಯಕ್ಕೆ ತಿಳಿಸಲಿದ್ದೇವೆ,ಕನಿಷ್ಟ ಮೂರು ತಿಂಗಳಾದರೂ ಕಾಲಾವಕಾಶ ಕೊಡುವಂತೆ ಕೋರುತ್ತೇವೆ ಎಂದು ಸಿಎಂ ಹೇಳಿದರು. ಶನಿವಾರ ಪಕ್ಷದ ಕೋರ್ ಕಮಿಟಿ ಸಭೆ ನಡೆಯಲಿದೆ. ವಿಧಾನಸಭೆಯಿಂದ ವಿಧಾನಪರಿಷತ್‍ಗೆ ನಡೆಯಲಿರುವ ನಾಲ್ಕು ಸ್ಥಾನಗಳು, 2 ಪದವೀಧರ ಮತ್ತು 2 ಶಿಕ್ಷಕರ ಕ್ಷೇತ್ರ ಹಾಗೂ ರಾಜ್ಯಸಭೆ ಚುನಾವಣೆ ಕುರಿತು ಪಕ್ಷದ ರಾಜ್ಯಾಧ್ಯಕ್ಷರು, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಜತೆ ಚರ್ಚಿಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

