ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಲೋಪದೋಷಗಳಿದ್ದರೆ ಸರಿಪಡಿಸಿಕೊಳ್ಳುತ್ತೇವೆ, ಆದರೆ ಕೆಲವರು ಇದರಲ್ಲಿ ರಾಜಕೀಯ ಮಾಡಲು ಹೊರಟಿದ್ದಾರೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರತಿದಿನ ಗೊಂದಲದ ಹೇಳಿಕೆಗಳನ್ನು ನೀಡುತ್ತಾ ಜನರಲ್ಲಿ ತಪ್ಪು ಭಾವನೆ ಮೂಡಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಷ್ಟ್ರಕವಿ ಕುವೆಂಪು, ಬಸವಣ್ಣ ಸೇರಿದಂತೆ ಮಹನೀಯರ ಬಗ್ಗೆ ಪಠ್ಯಪುಸ್ತಕದಲ್ಲಿ ಯಾವುದಾದರೂ ಲೋಪದೋಷಗಳಿದ್ದರೆ ಸರಿಪಡಿಸಿಕೊಳ್ಳಲಾಗುವುದು. ಪುಸ್ತಕಗಳನ್ನು ಓದದೆ ಟೀಕೆ ಮಾಡುತ್ತಿರುವುದು ಸರಿಯಲ್ಲ ಎಂದು ತಿಳಿಸಿದರು.
ಪಠ್ಯ ಪುಸ್ತಕದಲ್ಲಿ ಲೋಪದೋಷವಿದ್ದರೆ ಸರಿಪಡಿಸಿ ಮರು ಮುದ್ರಣ ಮಾಡಿ ಮಕ್ಕಳಿಗೆ ವಿತರಣೆ ಮಾಡುತ್ತೇವೆ. ಪ್ರತಿಪಕ್ಷದವರು ಮೊದಲು ಗೊಂದಲ ಸೃಷ್ಟಿಸುವುದನ್ನು ಕೈಬಿಡಲಿ ಎಂದು ಹೇಳಿದರು.
ತನಿಖೆಗೆ ಆದೇಶ: ರಾಯಚೂರು ನಗರಸಭೆಯಲ್ಲಿ ಕಲುಷಿತ ನೀರು ಕುಡಿದು ಮೂವರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಸಿದಂತೆ ಡಿವೈಎಸ್‍ಪಿ ನೇತೃತ್ವದಲ್ಲಿ ತನಿಖೆಗೆ ಸೂಚನೆ ನೀಡಲಾಗಿದೆ. ವರದಿ ಬಂದ ನಂತರ ತಪ್ಪಿತಸ್ಥರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಎಂದು ಇದೇ ವೇಳೆ ಸಿಎಂ ಹೇಳಿದರು.
ಕೆಲವರು ಮಳೆನೀರು ಕುಡಿದು ಸಾವನ್ನಪ್ಪಿದ್ದಾರೆ ಎಂದು ಹೇಳುತ್ತಿದ್ದಾರೆ. ಇನ್ನು ಕೆಲವರು ಕಲುಷಿತ ನೀರು ಎಂದು ದೂರುತ್ತಿದ್ದಾರೆ. ಜಲ ಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಗೆ ತನಿಖೆ ನಡೆಸಲು ಸೂಚಿಸಿದ್ದೇನೆ. ಮುಂದೆ ಈ ರೀತಿ ಆಗದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಿರುವುದಾಗಿ ಹೇಳಿದರು.
ಪರಿಹಾರ ಘೋಷಣೆ: ಘಟನೆಯಲ್ಲಿ ಸಾವನ್ನಪ್ಪಿದ ಮೂವರ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಯಿಂದ 5 ಲಕ್ಷ ಪರಿಹಾರ ನೀಡುವುದಾಗಿ ಬೊಮ್ಮಾಯಿ ಘೋಷಿಸಿದರು.
ಕೊರೊನ ಬಗ್ಗೆ ಆತಂಕ ಬೇಡ: ರಾಜ್ಯದಲ್ಲಿ ಕೊರೊನ ಪ್ರಕರಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಾಗುತ್ತಿದೆ, ಸರ್ಕಾರ ಇದನ್ನು ನಿಯಂತ್ರಿಸಲು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ ಸಾರ್ವಜನಿಕರು ಆತಂಕಪಡಬೇಕಿಲ್ಲ ಇದೇ ಸಂದರ್ಭದಲ್ಲಿ ಬೊಮ್ಮಾಯಿ ಹೇಳಿದರು.
ಕಳೆದ ನಾಲ್ಕೈದು ದಿನಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಮುಖವಾಗಿದೆ. ನಾವು ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದೇವೆ. ಯಾವುದೇ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಮನವಿ ಮಾಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳು ಸಭೆ ನಡೆಸಿ ನನಗೆ ವರದಿ ನೀಡಲಿದ್ದಾರೆ.
ಬಳಿಕ ಸಂಬಂಧಪಟ್ಟ ಇಲಾಖೆಗಳ ಸಚಿವರು, ಕಾರ್ಯದರ್ಶಿಗಳು, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮತ್ತಿತರ ಪ್ರಮುಖರ ಸಭೆ ನಡೆಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಬೊಮ್ಮಾಯಿ ಹೇಳಿದರು.

