ದಸರಾ ಹೆಸರಲ್ಲಿ ಸಾರ್ವಜನಿಕ ಕೆಲಸಗಳಿಗೆ ಅಡ್ಡಿಯಾಗಬಾರದು -ಎಸ್.ಟಿ.ಎಸ್ ಎಚ್ಚರಿಕೆ

ಬೆಂಗಳೂರು: ದಸರಾ ಆಚರಣೆ ಸಂದರ್ಭದಲ್ಲಿ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಅಡ್ಡಿಯಾಗದಂತೆ ಮೈಸೂರು ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2022ರ ಉನ್ನತ ಮಟ್ಟದ ಸಭೆಯ ನಂತರ ಅವರು ಮಾತನಾಡಿದರು.

ದಸರಾ ನೆಪದಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅಡ್ಡಿಯಾಗುತ್ತಿವೆ ಎಂದು ಜನಪ್ರತಿನಿಧಿಗಳು ಮುಖ್ಯಮಂತ್ರಿಗಳ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದರು.

ಅರಮನೆ ಆವರಣದೊಳಗೆ ನಡೆಯುವ ಕಾರ್ಯಕ್ರಮಗಳ ವೆಚ್ಚವನ್ನು ಅರಮನೆ ಆಡಳಿತ ಮಂಡಳಿ ಭರಿಸುವಂತೆ, ವಿದ್ಯುತ್ ದೀಪಾಲಂಕಾರದ ವ್ಯವಸ್ಥೆಯನ್ನು ಸಂಬಂಧಪಟ್ಟ ಇಲಾಖೆ ನೋಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ದಸರಾ ಉದ್ಘಾಟನೆ ಯಾರಿಂದ ಮಾಡಿಸಬೇಕು ಎಂಬುದರ ಕುರಿತು ಎಲ್ಲರ ಅಭಿಪ್ರಾಯ ಪಡೆದು ಮುಖ್ಯಮಂತ್ರಿಗಳು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಸಚಿವರು ತಿಳಿಸಿದರು.