ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಕೊನೆಯ ಆಷಾಢ ಶುಕ್ರವಾರದ ಸಂಭ್ರಮ ಮನೆ ಮಾಡಿದ್ದು ಅತಿ ಹೆಚ್ಚು ಭಕ್ತರು ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು.
ಮುಂಜಾನೆಯಿಂದಲೇ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ.
ಕೊನೆಯ ಶುಕ್ರವಾರ ತಾಯಿ ಸಿಂಹವಾಹಿನಿ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.
ಸಹಸ್ರಾರು ಭಕ್ತರು ಬಸ್ ಗಳ ಮೂಲಕ ತಾಯಿಯ ದರ್ಶನಕ್ಕೆ ಆಗಮಿಸಿದರೆ ಮೆಟ್ಟಿಲುಗಳ ಮೂಲಕವೂ ಭಕ್ತರು ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ.
ವಿವಿಧ ಬಗೆಯ ಹೂವುಗಳಿಂದ ದೇವಾಲಯವನ್ನು ಸಿಂಗರಿಸಲಾಗಿದೆ.
ಮುಂಜಾನೆ 3.30ರಿಂದಲೇ ಅಭಿಷೇಕ ಸೇರಿದಂತೆ ವಿಶೇಷ ಪೂಜೆಗಳು ನೆರವೇರಿದವು.
ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆಯುತ್ತಿದ್ದಾರೆ. ನೂಕು ನುಗ್ಗಲು ಗಲಾಟೆಗಳಾಗದಂತೆ ಪೊಲೀಸರು ಎಚ್ಚರ ವಹಿಸಿದ್ದರು.
ರಾತ್ರಿ 9.30ರವರೆಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಭಕ್ತಾದಿಗಳಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಸುಮಾರು 250ಬಾಣಸಿಗರು ಪ್ರಸಾದ ಸಿದ್ಧಪಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.
ಭಕ್ತರಿಗೆ ಪೊಂಗಲ್, ಉಪ್ಪಿಟ್ಟು, ಕೇಸರಿ ಬಾತ್, ಅನ್ನ ಸಾಂಬಾರ್ ಅನ್ನು ಪ್ರಸಾದದ ರೂಪದಲ್ಲಿ ನೀಡಲಾಗುತ್ತಿದೆ. ಸುಮಾರು ಐವತ್ತು ಸಾವಿರ ಭಕ್ತಾದಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.

