ಪಿಎಫ್ಐ – ಎಸ್‍ಡಿಪಿಐ ಮೇಲೆ ಅನುಮಾನ ವ್ಯಕ್ತಪಡಿಸಿದ ಆರಗ

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್‍ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪಿಎಫ್‍ಐ ಮತ್ತು ಎಸ್‍ಡಿಪಿಐ ಮೇಲೆ ಅನುಮಾನವಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಈಗಾಗಲೇ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಿದರು.

ಪ್ರಕರಣದ ತನಿಖೆ ಮುಂದುವರೆದಿದೆ,ಸದ್ಯಕ್ಕೆ ಯಾರ ಬಗ್ಗೆಯೂ ಪ್ರತಿಕ್ರಿಯಿಸುವುದಿಲ್ಲ. ಈ ಕೃತ್ಯವನ್ನು ಯಾರು ಮಾಡಿದ್ದಾರೆ ಎಂಬುದನ್ನು ನಿರ್ದಿಷ್ಟವಾಗಿ ಹೇಳಲಾಗುವುದಿಲ್ಲ ಎಂದು ಹೇಳಿದರು.

ಯಾರೇ ದುಷ್ಕೃತ್ಯ ಎಸಗಿದ್ದರೂ ಪೊಲೀಸರು ಪತ್ತೆಹಚ್ಚುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಪ್ರವೀಣ್ ಹತ್ಯೆ ಖಂಡಿಸಿ ಬಿಜೆಪಿಯಲ್ಲಿ ಆಕ್ರೋಶ ಭುಗಿಲೆದ್ದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾರ್ಯಕರ್ತರಲ್ಲಿ ಆಕ್ರೋಶ ವ್ಯಕ್ತವಾಗುವುದು ಸಹಜ ಎಂದು ಹೇಳಿದರು.

ಮೃತ ಪ್ರವೀಣ್  ಒಳ್ಳೆಯ ವ್ಯಕ್ತಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಬಿಜೆಪಿ ಕಾರ್ಯಕರ್ತರು ದೇಶದ ಹಿತಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ.

ನಮ್ಮ ಪಕ್ಷದ ಕಾರ್ಯಕರ್ತರನ್ನು ನಾವು ನಿಭಾಯಿಸುತ್ತೇವೆ ಅವರಿಗೆ ಸಾಂತ್ವಾನ ಹೇಳುತ್ತೇವೆ ಎಂದು ಆರಗ ಜ್ಞಾನೇಂದ್ರ ಹೇಳಿದರು.