ಮೈಸೂರು: ಒಂದರ ಹಿಂದೆ ಒಂದು ಕೊಲೆ ನಡೆದಿರುವುದು ನೋಡಿದರೆ ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಮಸೂದ್ ಮತ್ತು ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿರುವ ಬೆನ್ನಲ್ಲೇ ಸೂರತ್ ಕಲ್ ನಲ್ಲಿ ರಾತ್ರಿ ಫಾಝೀಲ್ ಎಂಬಾತನ ಕೊಲೆ ನಡೆದಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದು, ರಾಜ್ಯದ ಬಿಜೆಪಿ ಸರ್ಕಾರ ಕೊಲೆಗಡುಕ ಸರ್ಕಾರ ಎಂದು ಹ್ಯಾಷ್ ಟ್ಯಾಗ್ ಮಾಡಿದ್ದಾರೆ.
ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಇದಕ್ಕೆ ಹೊಣೆಗಾರರು ಎಂದು ಎಚ್ಚರಿಸಿದ್ದಾರೆ.
ಸಿಎಂ ಜಿಲ್ಲೆಯಲ್ಲಿರುವಾಗಲೇ ನಡೆದಿರುವ ಹತ್ಯೆ ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ ಎಂದು ಹೇಳಿದ್ದಾರೆ.
ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ನಿಯಂತ್ರಣವೆ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ ಎಂದು ಸಿದ್ದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು ಎಂದು ಎಚ್ಚರಿಸಿದ್ದಾರೆ.
ಕೊಲೆಗಡುಕರು ಯಾವುದೇ ಪಕ್ಷ, ಪಂಥ, ಜಾತಿ, ಧರ್ಮದವರಾಗಿದ್ದರೂ ಸರಿ ಅವರನ್ನು ಪತ್ತೆ ಹಚ್ಚಿ ಜೈಲಿಗೆ ಅಟ್ಟಬೇಕಾಗಿದೆ.
ಆದರೆ ಸರ್ಕಾರ ಹೆಣಗಳನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರ ಹಾಕುತ್ತಿರುವುದು ಅತ್ಯಂತ ದುರದೃಷ್ಟಕರ ಎಂದಿದ್ದಾರೆ.
ಬಿಜೆಪಿ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ಮತ್ತು ಜನಾಕ್ರೋಶವನ್ನು ಶಾಂತಗೊಳಿಸಲು ತನಿಖೆಯ ನೆಪದಲ್ಲಿ ಆರೋಪಿಗಳ ಹೊರತಾಗಿ ಅಮಾಯಕರಿಗೂ ಕಿರುಕುಳ ನೀಡುವುದು ಸಲ್ಲದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

