ಪ್ರವೀಣ್ ಕೊಲೆ ಪ್ರಕರಣ ಸಂಬಂಧ ಇಬ್ಬರ ಬಂಧನ -ಆರಗ ಜ್ಞಾನೇಂದ್ರ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಬೆಳ್ಳಾವೆಯ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.

ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು,  ಈ ಪ್ರಕರಣದಲ್ಲಿ ಯಾರೆಲ್ಲ ಶಾಮೀಲಾಗಿದ್ದರೋ ಅವರೆಲ್ಲರನ್ನೂ ಮಿಂಚಿನ ಕಾರ್ಯಾಚರಣೆ ನಡೆಸಿ ನಮ್ಮ ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಿದರು.

ಕೊಲೆಯನ್ನು ಯಾವ ಕಾರಣಕ್ಕಾಗಿ ಮಾಡಲಾಗಿದೆ, ಇದರಲ್ಲಿ ಯಾರು ಶಾಮೀಲಾಗಿದ್ದಾರೆ ಎಂಬುದು ಗೊತ್ತಿದೆ

ತನಿಖೆ ನಡೆಯುತ್ತಿರುವುದರಿಂದ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಯಾರು ಕೃತ್ಯದಲ್ಲಿ ಭಾಗಿಯಾಗಿದ್ದಾರೋ ಅವರನ್ನು ವಿಚಾರಣೆ ನಡೆಸಿ ಬಂಧಿಸಲಾಗಿದೆ. ತನಿಖೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದರಿಂದ ಈಗಲೇ ನಾನು ಏನೂ ಹೇಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಪ್ರಕರಣದಲ್ಲಿ ನಮ್ಮ ಪೊಲೀಸರು ಅನಗತ್ಯವಾಗಿ ಯಾವುದೇ ಅಮಾಯಕ ವ್ಯಕ್ತಿಗಳನ್ನು ಬಂಧಿಸಿಲ್ಲ. ತನಿಖೆ ವೇಳೆ ಅಧಿಕಾರಿಗಳು ನಿಖರವಾದ ಮಾಹಿತಿ ಸಂಗ್ರಹಿಸಿ ಬಂಧಿಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಆರಗಜ್ಞಾನೇಂದ್ರ ತಿಳಿಸಿದರು. ಫಾಜಿಲ್ ಪ್ರಕರಣದಲ್ಲೂ ತನಿಖೆ ಮುಂದುವರೆದಿದೆ. ಅದೇ ರೀತಿ ಮಸೂದ್ ಕೊಲೆ ಪ್ರಕರಣದಲ್ಲಿ ಯಾರು ಶಾಮೀಲಾಗಿದ್ದಾರೋ ಅವರನ್ನು ಸಹ ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಿದರು.