ದೇಶದಲ್ಲಿ ಶಾಂತಿ ಸ್ಥಾಪಿಸಲು ಭಾರತ ಜೋಡೋ ಯಾತ್ರೆ -ಡಿಕೆಶಿ

ಬೆಂಗಳೂರು: ದೇಶದಲ್ಲಿ ಸಾಮಾಜಿಕ ಸಾಮರಸ್ಯ ಹದಗೆಡುತ್ತಿದ್ದು, ಕುವೆಂಪು ಅವರು ಹೇಳಿರುವಂತೆ ನಮ್ಮ ನಾಡು ಶಾಂತಿಯ ತೋಟ ಆಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಕುಟುಂಬವೂ ಬೆಲೆ ಏರಿಕೆಯಿಂದ ತತ್ತರಿಸುತ್ತಿದೆ, ಅದರಲ್ಲೂ ಮಹಿಳೆಯರಿಗೆ ಆರ್ಥಿಕ, ಮಾನಸಿಕ ಶಕ್ತಿ ತುಂಬಬೇಕು ಎಂದು ತಿಳಿಸಿದರು.
ನಿರುದ್ಯೋಗ ಪ್ರಮಾಣ ಹೆಚ್ಚಿದ್ದು ಯುವಕರಿಗೆ ಉದ್ಯೋಗ ಸಿಗಬೇಕು, ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಸರ್ಕಾರ ರಚನೆ ಆಗಬೇಕು, ರೈತರು ಹಾಗೂ ಕಾರ್ಮಿಕರ ಬದುಕು ಹಸನಾಗಬೇಕು.
ಈ ಐದು ಉದ್ದೇಶದೊಂದಿದೆ ಎಲ್ಲ ವರ್ಗದವರನ್ನು ರಕ್ಷಣೆ ಮಾಡಲು ಭಾರತ ಜೋಡೋ ಯಾತ್ರೆ ನಡೆಯಲಿದೆ ಎಂದು ಡಿಕೆಶಿ ಹೇಳಿದರು.
ನಮ್ಮ ರಾಜ್ಯದಲ್ಲಿನ ಪಾದಯಾತ್ರೆ ಇಡೀ ದೇಶಕ್ಕೆ ಮಾದರಿಯಾಗಲಿದೆ ಎಂಬ ವಿಶ್ವಾಸವಿದೆ. 
ಈ ಪಾದಯಾತ್ರೆಯಲ್ಲಿ ಶಿಕ್ಷಕರು, ನಿವೃತ್ತ ಅಧಿಕಾರಿಗಳು, ಸಂಘ ಸಂಸ್ಥೆಗಳು, ರೈತರು, ಕಾರ್ಮಿಕರಿಗೆ ಅವಕಾಶ ಮಾಡಿಕೊಡಲಾಗುವುದು. 
ರಾಜ್ಯದಲ್ಲಿ ನಿತ್ಯ 25 ಕಿ.ಮೀ ದೂರ ಪಾದಯಾತ್ರೆ ಮಾಡಲಾಗುವುದು. ಈ ಪಾದಯಾತ್ರೆಗೆ ಎಲ್ಲ ಜಿಲ್ಲೆಗಳ ಜನರು ಭಾಗವಹಿಸಲು ಅವಕಾಶ ಮಾಡಿಕೊಡಲಾಗುವುದು. ರಾಹುಲ್ ಗಾಂಧಿ ಅವರು ರಾಷ್ಟ್ರಾದ್ಯಂತ 3,500 ಕಿ.ಮೀ. ಹೆಜ್ಜೆ ಹಾಕಲಿದ್ದಾರೆ ಎಂದರು. 
ರಾಜ್ಯದ ಪ್ರಮುಖ ನಾಯಕರೆಲ್ಲರೂ ಸೆ. 7 ರಂದು ಕನ್ಯಾಕುಮಾರಿಯಲ್ಲಿ ಈ ಯಾತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇವೆ ಎಂದು ತಿಳಿಸಿದರು.
ಬಿ.ಕೆ ಹರಿಪ್ರಸಾದ್ ಅವರಿಗೆ ರಾಜ್ಯದಲ್ಲಿನ ಪಾದಯಾತ್ರೆ ಉಸ್ತುವಾರಿ ನೀಡಲಾಗಿದ್ದು, ರಾಷ್ಟ್ರ ಮಟ್ಟದ ಸಮಿತಿಯಲ್ಲಿ ಕೆ.ಜೆ. ಜಾರ್ಜ್, ಸಲೀಂ ಅಹ್ಮದ್ ಅವರಿಗೆ ಸ್ಥಾನ ನೀಡಲಾಗಿದೆ.
ಮುಂದಿನ ದಿನಗಳಲ್ಲಿ ಎಲ್ಲರ ಜತೆ ಸಭೆ ಮಾಡಿ ಯಾರೆಲ್ಲಾ 21 ದಿನ ನಡೆಯಬೇಕು ಎಂದು ಅಭಿಪ್ರಾಯ ಸಂಗ್ರಹಿಸಿ, ನಂತರ ಅವರನ್ನು ಆಯ್ಕೆ ಮಾಡಲಾಗುವುದು. ಎಲ್ಲರಿಗೂ ಅಧಿಕೃತ ವೆಬ್ ಸೈಟ್ ನಲ್ಲಿ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಬಳ್ಳಾರಿಯಲ್ಲಿ ಒಂದು ದಿನ ಸಾರ್ವಜನಿಕ ಸಮಾವೇಷ ಮಾಡಲಾಗುವುದು. ಮೈಸೂರಿನಲ್ಲಿ ತಾಂತ್ರಿಕ ಸಮಸ್ಯೆ ಇದೆ. ಅಕ್ಟೋಬರ್ 4-5 ರಂದು ದಸರಾ ಹಬ್ಬ ನಡೆಯಲಿದ್ದು, ಈ ದಿನ ಯಾವ ರೀತಿ ಮಾಡಬೇಕು ಎಂದು ದೆಹಲಿ ನಾಯಕರ ಜತೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಡಿಕೆಶಿ ತಿಳಿಸಿದರ
ಭಾರತ ಒಗ್ಗೂಡಿಸಲು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ದೇಶದ ಐಕ್ಯತೆ ಯಾತ್ರೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ‌.ಶಿವಕುಮಾರ್ ತಿಳಿಸಿದರು.
ಪಾದಯಾತ್ರೆ ಜವಾಬ್ದಾರಿಯನ್ನು ಕಾಂಗ್ರೆಸ್ ವಹಿಸಿದ್ದರೂ ಇದು ಪಕ್ಷಾತೀತ ಯಾತ್ರೆಯಾಗಿರುತ್ತದೆ ಎಂದು ಹೇಳಿದರು.