ಅಕ್ಟೋಬರ್ ನಲ್ಲಿ ಏಳನೇ ವೇತನ ಆಯೋಗ ರಚನೆ ;ಬೊಮ್ಮಾಯು ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ವಿಧಾನ ಸೌಧದ ಔತಣ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿದ್ದ  ಸಮಾರಂಭದಲ್ಲಿ ಸಿಎಂ ಮಾತನಾಡಿದರು.
ಸರ್ಕಾರಿ ನೌಕರರು, ವಿಶೇಷವಾಗಿ ಪತ್ರಾಂಕಿತ ಎ ಮತ್ತು ಬಿ ಗುಂಪಿನ ನೌಕರರು, ಪುಣ್ಯ ಕೋಟಿ ಯೋಜನೆಯಡಿ 11,000 ರೂಪಾಯಿ ನೀಡಿ, ಗೋವುಗಳನ್ನು ದತ್ತು ಪಡೆದು, ಗೋ ಸಂರಕ್ಷಣೆ ಮಾಡುವಂತೆ ಮನವಿ ಮಾಡಿದರು. 
ಬದುಕಿನಲ್ಲಿ ಸೇವೆ ಮಾಡಿ ಸಂತೃಪ್ತಿ ಪಡೆಯುವುದು ಕಾಯಕ. ಸರ್ಕಾರಕ್ಕೆ ತೆರಿಗೆ ಪಾವತಿಸುವ ಪ್ರಜೆಗಳೇ ನಮ್ಮ ಮಾಲೀಕರ
ಆದಕಾರಣ, ಕಾಲಕ್ಕೆ ತಕ್ಕಂತೆ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಪ್ರಜೆಗಳ ನೋವು ನಲಿವುಗಳಿಗೆ ಸ್ಪಂದಿಸಿ ಎಂದು ಸಿಎಂ ಸಲಹೆ ನೀಡಿದರು.
ರಾಜ್ಯ ಸರ್ಕಾರದ ವತಿಯಿಂದ ಪ್ರಪ್ರಥಮ ಬಾರಿಗೆ ಆಯೋಜಿಸಿದ್ದ ಸರ್ಕಾರಿ ನೌಕರರ ದಿನಾಚರಣೆಯ ಸಂದರ್ಭದಲ್ಲಿ ಆರೋಗ್ಯ ಸಂಜೀವಿನಿ ನಗದು ರಹಿತ ವೈದ್ಯಕೀಯ ಸೇವಾ ಯೋಜನೆಗೆ ಚಾಲನೆ ನೀಡಿದರು.
30 ನೌಕರರಿಗೆ ತಲಾ ಐವತ್ತು ಸಾವಿರ ರೂಪಾಯಿ ನಗದು ಒಳಗೊಂಡ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು  ಸಿಎಂ ಪ್ರದಾನ ಮಾಡಿದರು‌
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮಾತನಾಡಿ ಸರ್ಕಾರಿ ಸೇವೆಗೆ ಬರಲು ದೇವರ ಆಶೀರ್ವಾದ ಇರಬೇಕು. ಆದಕಾರಣ, ಸರ್ಕಾರಿ ನೌಕರರು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸಂಪುಟ ಶಾಖೆಯ ಉಪ ಕಾರ್ಯದರ್ಶಿ ಆರ್ ಚಂದ್ರಶೇಖರ್ ಪ್ರಶಸ್ತಿ ಪುರಸ್ಕೃತರ ಪರವಾಗಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆಡಳಿತ ಸುಧಾರಣಾ ವಿಭಾಗದ ಅಧೀನ ಕಾರ್ಯದರ್ಶಿ ಬಿ. ಎಸ್. ಲಕ್ಷ್ಮಣ್ ಅವರನ್ನು ಮುಖ್ಯಮಂತ್ರಿಗಳು ಗೌರವಿಸಿದರು.
ಕಂದಾಯ ಸಚಿವ ಆರ್ ಅಶೋಕ್, ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.