ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ದಾಖಲೆ ಪ್ರಮಾಣದಲ್ಲಿ ಗೆಲುವು ಸಾಧಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ನಿರೀಕ್ಷೆಗೂ ಮೀರಿ ಗೆಲುವು ಸಾಧಿಸಲಿದ್ದೇವೆ ಎಂದು ಹೇಳಿದರು.
ಜನರ ನಾಡಿಮಿಡಿತ ಅರಿತೇ ನಾನು ಈ ಮಾತು ಹೇಳುತ್ತಿದ್ದೇನೆ ಎಂದರು.
ರಾಜ್ಯದ ಜನತೆಗೆ ನಮ್ಮ ಸರ್ಕಾರ ಹಲವಾರು ಯೋಜನೆಗಳನ್ನು ಘೋಷಣೆ ಮಾಡಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಈಗಿನ ನಮ್ಮ ಅಧಿಕಾರಾವಧಿಯಲ್ಲಿ ಆಗಿರುವ ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಸಿಎಂ ಹೇಳಿದರು.
ದೊಡ್ಡಬಳ್ಳಾಪುರದಲ್ಲಿ ಹಮ್ಮಿಕೊಂಡಿರುವ ಜನಸ್ಪಂದನ ಸಮಾವೇಶಕ್ಕೆ ಎರಡು ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಸೇರಲಿದ್ದಾರೆ. ಕೇಂದ್ರ ಸಚಿವರಾದ ಸ್ಮೃತಿ ಇರಾನಿ ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ.
ನಮ್ಮ ಯೋಜನೆಗಳು ಎಷ್ಟು ಪರಿಣಾಮಕಾರಿಯಾಗಿ ಅನುಷ್ಠಾನವಾಗಿದೆ ಎಂಬುದನ್ನು ಜನರಿಗೆ ತಿಳಿಸಿಕೊಡುತ್ತೇವೆ ಎಂದು ಹೇಳಿದರು.
ವಿಶೇಷ ಪೂಜೆ: ದೊಡ್ಡಬಳ್ಳಾಪುರಕ್ಕೆ ತೆರಳುವ ಮುನ್ನ ಮುಖ್ಯಮಂತ್ರಿ ಬೊಮ್ಮಾಯಿ ಅವರು ಪ್ಯಾಲೇಸ್ ರಸ್ತೆಯ ಬಾಲಬ್ರೂಹಿಯಲ್ಲಿರುವ ಮಾರುತಿ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

