ಬೆಂಗಳೂರು: ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಪಾರ ಜನಸಂದಣಿ ಕಾರ್ಯಕ್ರಮ ಮತ್ತು ದೊಡ್ಡಬಳ್ಳಾಪುರದ ಜನಸ್ಪಂದನಕ್ಕೆ ಆಗಮಿಸಿದ ಜನಸಾಗರ ಗಮನಿಸಿ ಸಿದ್ದರಾಮಯ್ಯರು ಸ್ಥಿಮಿತ ಕಳೆದುಕೊಂಡಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟೀಕಿಸಿದ್ದಾರೆ.
ಅದಕ್ಕಾಗಿಯೇ ಅವರು ತಮ್ಮ ಸುಳ್ಳಿನ ಸರಮಾಲೆ, ವ್ಯರ್ಥ ಆರೋಪಗಳ ಮೂಲಕ ನಾಟಕ ಮುಂದುವರಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ನಾಡಿನ ಜನತೆ ನಿರ್ಧರಿಸಿದ್ದು, ಅಧಿಕಾರ ಗಳಿಸುವ ಕಾಂಗ್ರೆಸ್ಸಿಗರ ಕನಸು ಕೇವಲ ಹಗಲುಗನಸಾಗಲಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯರನ್ನು ಜನರು ಸೋಲಿಸಿ ರಾಜಕೀಯವಾಗಿ ಮೂಲೆಗುಂಪಾಗುವಂತೆ ಮಾಡಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಸಿದ್ದರಾಮಯ್ಯ ಎಂದರೆ ಡೋಂಗಿತನ, ಹಿಂದೂ ವಿರೋಧಿತನದ ಸಂಕೇತ. ರಾಷ್ಟ್ರವಿರೋಧಿ ಶಕ್ತಿಗಳ ಜೊತೆ ಕೈ ಜೋಡಿಸುವ ಮತ್ತು ಧರ್ಮಗಳನ್ನು ಒಡೆಯುವ ಸಿದ್ದರಾಮಯ್ಯರ ಸ್ವಾರ್ಥ ರಾಜಕಾರಣ ಜನರಿಗೆ ಸ್ಪಷ್ಟವಾಗಿ ತಿಳಿದಿದೆ.
ಟ್ವೀಟ್‍ಗಳ ಮೂಲಕ ಹಾಗೂ ಹೇಳಿಕೆಗಳ ಮೂಲಕ ನಿಮ್ಮನ್ನೇ ನೀವು ಜನರ ಮುಂದಿಟ್ಟು ಅಪಹಾಸ್ಯಕ್ಕೆ ಸಿಲುಕುತ್ತಿದ್ದೀರಿ ಎಂದು ಜರಿದಿದ್ದಾರೆ.
ಬಿಜೆಪಿ ಸರಕಾರ ಜನಪರವಾಗಿದೆ. ಬಿಜೆಪಿ ಯಾವತ್ತೂ ಸಮಾಜದ ಕಟ್ಟಕಡೆಯ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿ ಮತ್ತು ಸಶಕ್ತೀಕರಣದ ಪ್ರಯತ್ನದಲ್ಲಿರುವುದು ಜನರಿಗೆ ತಿಳಿದಿದೆ ಎಂದು ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರಕಾರವು ಬೆಂಗಳೂರಿನ ಅಭಿವೃದ್ಧಿಗೆ 6 ಸಾವಿರ ಕೋಟಿ ನೀಡಿ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದೆ.
ಕಳೆದ ಹಲವು ದಶಕಗಳಲ್ಲೇ ಅತ್ಯಧಿಕ ಮಳೆ ಭಾರತದಾದ್ಯಂತ ಮತ್ತು ಬೆಂಗಳೂರಿನಲ್ಲೂ ಬಂದಿದೆ. ಮಳೆ- ಅತಿವೃಷ್ಟಿಯನ್ನು ಎದುರಿಸಲು ಬಿಜೆಪಿ ತಕ್ಷಣವೇ ಮುಂದಾಯಿತು ಎಂದು ಸಮರ್ಥಿಸಿಕೊಂಡಿದ್ದಾರೆ.
ಅರ್ಕಾವತಿ ಹಗರಣ ಸೇರಿ ವಿವಿಧ ಭ್ರಷ್ಟಾಚಾರ ಹಗರಣಗಳನ್ನು ಸರಕಾರ ಬಯಲಿಗೆ ಎಳೆಯಲಿದೆ ಎಂದು ಹೇಳಿದ ಬಳಿಕ ಸಿದ್ದರಾಮಣ್ಣನಿಗೆ ಚಳಿಜ್ವರ ಬಂದಂತಿದೆ ಅದಕ್ಕೇ ಸದಾ ಪ್ರಚಾರದಲ್ಲಿರಲು ಸುಳ್ಳು ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ಕಟೀಲ್ ಟೀಕಿಸಿದ್ದಾರೆ.

