ಬಿಎಂಎಸ್ ಟ್ರಸ್ಟ್‌ನಲ್ಲಿನ ಅಕ್ರಮ ಕುರಿತು ಉನ್ನತಮಟ್ಟದ ತನಿಖೆ ನಡೆಸಿ -ಎಚ್ ಡಿ ಕೆ

ಬೆಂಗಳೂರು: ಬಿಎಂಎಸ್ ಟ್ರಸ್ಟ್‌ನಲ್ಲಿ ನಡೆದಿರುವ ಅಕ್ರಮ ಕುರಿತು ಉನ್ನತಮಟ್ಟದ ತನಿಖೆ ನಡೆಸಬೇಕು, ಆ ಟ್ರಸ್ಟ್‌ನ ಎಲ್ಲಾ ಸ್ವತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಕೂಡಲೇ ರಾಜೀನಾಮೆ‌ ನೀಡಬೇಕು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿ ಒತ್ತಾಯಿಸಿದ್ದಾರೆ.

ವಿಧಾನಸಭೆಯಲ್ಲೇ ಎಲ್ಲವನ್ನೂ ದಾಖಲೆ ಸಮೇತ ಇಟ್ಟಿದ್ದೇನೆ. ಆ ದಾಖಲೆಗಳೇ ಎಲ್ಲವನ್ನೂ ಹೇಳುತ್ತವೆ ಎಂದಿದ್ದಾರೆ.

ಹೊಡೆದ ಗುಂಡು ಎಲ್ಲಿ ವಿಫಲವಾಗಿದೆ ಅದನ್ನು ವಿಫಲಗೊಳಿಸುವ ಇನ್ನೊಂದು ಹುನ್ನಾರ, ಷಡ್ಯಂತ್ರ ಈಗ ನಡೆದಿದೆ ಅಷ್ಟೇ.

ಬಿಎಂಎಸ್ ಟ್ರಸ್ಟ್ ಬಗ್ಗೆ ರಾಜ್ಯಬಿಜೆಪಿ ಸರ್ಕಾರ ಕಾನೂನು ರೀತಿ ಕ್ರಮ ವಹಿಸಿದೆ ಎಂದು ಉನ್ನತ ಶಿಕ್ಷಣ ಸಚಿವರು ಹೇಳಿದ್ದಾರೆ.

ಕಾನೂನುರೀತ್ಯ ಕ್ರಮ ಎಂದರೆ, ಸಾವಿರಾರು ಕೋಟಿ ರೂ. ಮೌಲ್ಯದ ಸರ್ಕಾರಿ ಸ್ವತ್ತನ್ನು ಸದ್ದಿಲ್ಲದೆ ಖಾಸಗಿ ರಿಯಲ್ ಎಸ್ಟೇಟ್ ಪಟ್ಟಭದ್ರರಿಗೆ ಧಾರೆ ಎರೆದುಕೊಡುವುದಾ  ಎಂದು ಸಚಿವರನ್ನು ಎಚ್ ಡಿಕೆ ಪ್ರಶ್ನಿಸಿದ್ದಾರೆ.

ಸದನದಲ್ಲಿ ನಾನಿಟ್ಟ ಪ್ರತಿ ದಾಖಲೆ ಅಕ್ರಮಕ್ಕೆ ಕನ್ನಡಿ ಹಿಡಿದಿದೆ. ನಿಮ್ಮ ಕಣ್ಣಿಗೆ ಈ ಅಕ್ರಮವೆಲ್ಲಾ ಸಕ್ರಮವಾಗಿದ್ದರೆ, ಇದಕ್ಕಿಂತ ದುರಂತ ಇನ್ನೊಂದಿಲ್ಲ ಎಂದಿದ್ದಾರೆ.

ಎಲ್ಲಾ ದಾಖಲೆಗಳನ್ನು ಮತ್ತೊಮ್ಮೆ ನೋಡಿ. ಅಷ್ಟೂ ಆಸ್ತಿಯನ್ನು ಲಪಟಾಯಿಸಲು ಟ್ರಸ್ಟ್ ನಲ್ಲಿ ನಡೆದ ಷಡ್ಯಂತ್ರಕ್ಕೆ ಸಚಿವರಾಗಿ ನೀವು ಹೇಗೆಲ್ಲಾ ಸಹಕಾರ ನೀಡಿದ್ದೀರಿ ಎನ್ನುವುದು ಜಗಜ್ಜಾಹೀರಾಗಿದೆ ಎಂದು ಹೇಳಿದ್ದಾರೆ.

ಉನ್ನತ ಶಿಕ್ಷಣ ಸಚಿವರೇ, 1957ರಲ್ಲಿ ರಚನೆಗೊಂಡು ನೋಂದಣಿಯಾದ ಬಿಎಂಎಸ್ ಟ್ರಸ್ಟಿನ ಮೂಲ ಡೀಡನ್ನು ಒಮ್ಮೆ ಓದಿ, ದಾನಿ ಟ್ರಸ್ಟಿ, ಆಜೀವ ಟ್ರಸ್ಟಿ ನೇಮಕದ ಬಗ್ಗೆ ಇರುವ ಷರತ್ತುಗಳನ್ನೂ ತಿಳಿಯಿರಿ ಎಂದು ಹೇಳಿದ್ದಾರೆ.

ಆದರೆ, ನೀವು ಜನರಿಗೆ ಮತ್ತು ಸರ್ಕಾರಕ್ಕೆ ಸೇರಿದ ಇಡೀ ಟ್ರಸ್ಟಿನ ಆಸ್ತಿ ಹೊಡೆಯಲು ನಿಂಥವರ ಪರ ನಾಚಿಕೆ ಇಲ್ಲದೆ ವಕಾಲತ್ತು ವಹಿಸುತ್ತಿದ್ದೀರಿ ಎಂದು ಟೀಕಿಸಿದ್ದಾರೆ.

ಬಿಎಂಎಸ್ ಎಂಜೀಯರಿಂಗ್‌ ಕಾಲೇಜಿನಲ್ಲಿ ಸೀಟ್‌ ಬ್ಲಾಕಿಂಗ್‌, ಪೇಮೆಂಟ್‌ ಸೀಟುಗಳನ್ನು 50:50 ರಂತೆ ಟ್ರಸ್ಟಿಗಳಿಬ್ಬರು ಹಂಚಿಕೊಂಡಿದ್ದು, ನಿಮ್ಮ ಗಮನಕ್ಕೆ ಬರಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಕಾಮೆಡ್-ಕೆ ಆಕ್ಷೇಪಣಾ ಪತ್ರ, ಸರ್ಕಾರದ ಇಬ್ಬರು ಅಧಿಕಾರಿಗಳು ಟ್ರಸ್ಟಿನ ಅಕ್ರಮಗಳ ಬಗ್ಗೆ ಬರೆದ ಪತ್ರಗಳನ್ನು ನೀವು ಓದಲಿಲ್ಲವೇ ಸಚಿವರೇ ಓದಲಿಲ್ಲ ಎಂದರೆ, ಅದಕ್ಕೆ ಕಾರಣವೇನು ಎಂದು ಕಿಡಿಕಾರಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಎಂದರೆ ಸರ್ಕಾರಿ ಸ್ವತ್ತುಗಳನ್ನು ಭೂರಕ್ಕಸರ ಬಾಯಿಗೆ ಹಾಕುವುದಾ.

ಮುಜರಾಯಿ ಇಲಾಖೆಯ ದೊಡ್ಡ ಬಸವಣ್ಣ, ಕಾರಂಜಿ ಆಂಜನೇಯ ಸ್ವಾಮಿ ದೇಗುಲಗಳಿಗೆ ಸೇರಿದ ಕೋಟ್ಯಂತರ ರೂ. ಬೆಲೆಯ ಆಸ್ತಿಯನ್ನು ನುಂಗಲು ಹೊರಟ ನುಂಗಣ್ಣರಿಗೆ ದಾರಿ ಸಲೀಸು ಮಾಡಿಕೊಡುವುದಾ ಎಂದು    ಎಚ್ ಡಿ ಕೆ ವ್ಯಂಗ್ಯವಾಡಿದ್ದಾರೆ.