ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಳೆ ಅವರು ಅಧಿಕಾರ ಸ್ವೀಕರಿಸಿದರು.
ರಾಜಭವನದ ಗಾಜಿನಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪಿ.ಬಿ.ವರಳೆ ಅವರಿಗೆ ರಾಜ್ಯಪಾಲ ತಾವರ್ ಚಂದ್ ಗೆಲ್ಹೋಟ್ ಅವರು ಅಧಿಕಾರ ಗೌಪ್ಯತೆ ಬೋಧಿಸಿದರು.
ಅ.11ರಂದು ಪಿ.ಬಿ.ಹೊರಳೆ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿತ್ತು.
ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದ ಅವರು, ಕೆಲವು ಮಹತ್ವದ ತೀರ್ಪುಗಳನ್ನು ನೀಡಿ ಗಮನ ಸೆಳೆದಿದ್ದರು.
ಮಹಾರಾಷ್ಟ್ರದ ನಿಪಾನಿ ಎಂಬಲ್ಲಿ ಜನಿಸಿದ ವರಳೆ ಅವರು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮರಾಠ ವಿವಿಯಲ್ಲಿ ಕಾನೂನು ಪದವಿ ಪಡೆದಿದ್ದಾರೆ.
ನಂತರ ಹಿರಿಯ ವಕೀಲ ಎಸ್.ಎನ್.ಲೋಹಿಯ ಬಳಿ ಸಹಾಯಕರಾಗಿ ವೃತ್ತಿ ಜೀವನ ಆರಂಭವಿಸಿದರು.
ಅವರು ಔರಂಗಬಾದ್ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕರಾಗಿಯೂ ಸೇವೆ ಸಲ್ಲಿಸಿದ್ದಾರೆ.
ನಂತರ ಬಾಂಬೆ ಹೈಕೋರ್ಟ್ ನ ಔರಂಗಬಾದ್ ಪೀಠದಲ್ಲಿ ಮಹಾರಾಷ್ಟ್ರ ಸರ್ಕಾರದ ಸಹಾಯಕ ಅಭಿಯೋಜಕರಾಗಿ, 2008ರಲ್ಲಿ ಬಾಂಬೆ ಹೈಕೋರ್ಟ್ ನ ನ್ಯಾಯಾಧೀಶರಾಗಿ ನೇಮಕವಾಗಿದ್ದರು.
ಹಾಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್.ಎಸ್ ಓಕಾ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಮುಂಬಡ್ತಿ ಪಡೆದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಪಿ.ಬಿ.ವರಳೆ ಅವರನ್ನು ನೇಮಿಸಲಾಗಿದೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮತ್ತಿತರರು ಉಪಸ್ಥಿತರಿದ್ದರು.

