ವರಿಷ್ಠರ ಸಮಯ ಸಿಕ್ಕ ತಕ್ಷಣ ಸಂಪುಟ ವಿಸ್ತರಣೆ ಮಾತುಕತೆ -ಸಿಎಂ

ಬೆಂಗಳೂರು: ವರಿಷ್ಠರ ಸಮಯ, ಅವಕಾಶ ಸಿಕ್ಕ ತಕ್ಷಣ ದೆಹಲಿಗೆ ತೆರಳಿ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಮಾತುಕತೆ ನಡೆಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 
ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ವರಿಷ್ಠರ ಭೇಟಿಗೆ ಸಮಯಾವಕಾಶ ಕೇಳಿದ್ದೇನೆ. ಶೀಘ್ರದಲ್ಲೇ ಸಿಗುವ ವಿಶ್ವಾಸವಿದೆ ಎಂದರು. 
ಜನಸಂಕಲ್ಪ ಯಾತ್ರೆ ಮಧ್ಯೆಯೇ ದೆಹಲಿಗೆ ತೆರಳುತ್ತೇನೆ. ವಾರಾಂತ್ಯದೊಳಗೆ ಆಗಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಂಪುಟ ವಿಸ್ತರಣೆಯಾಗಬೇಕೆಂಬ ಬೇಡಿಕೆ ಇದೆ. ಹಲವಾರು ಆಕಾಂಕ್ಷಿಗಳು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಎಲ್ಲವನ್ನು ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಹೇಳಿದರು.
ಒಕ್ಕಲಿಗ ಸಮುದಾಯದ ಮೀಸಲಾತಿ ಹೆಚ್ಚಳ ಮಾಡಬೇಕೆಂಬ ಡಾ.ನಿರ್ಮಲಾನಂದನಾಥ ಸ್ವಾಮಿಗಳ ಬೇಡಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾವುದೇ ಸಮುದಾಯದ ಮೀಸಲಾತಿಯನ್ನು ಹೆಚ್ಚಳ ಮಾಡಬೇಕಾದರೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು.
ಆಯೋಗವು ನೀಡುವ ಶಿಫಾರಸ್ಸಿನ ಮೇಲೆ ಸರ್ಕಾರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಿದೆ.
ಒಕ್ಕಲಿಗ ಸಮುದಾಯ ಸೇರಿದಂತೆ ಬೇರೆ ಬೇರೆ ಸಮುದಾಯದವರು ಕೂಡ ಬೇಡಿಕೆ ಇಟ್ಟಿದ್ದಾರೆ. ಸರ್ಕಾರ ಎಲ್ಲವನ್ನು ಕೂಲಂಕುಷವಾಗಿ ಕಾನೂನು ಚೌಕಟ್ಟು ಮತ್ತು ಸಂವಿಧಾನದಡಿ ಸೂಕ್ತವಾದ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದು ಸಿಎಂ ತಿಳಿಸಿದರು.
ಬೆಂಗಳೂರಿನಲ್ಲಿ ರಸ್ತೆಗುಂಡಿಗೆ ಮಹಿಳೆ ಸಾವನ್ನಪ್ಪಿದ ಪ್ರಕರಣದ ಕುರಿತಂತೆ ವಿಸ್ತೃತ ವರದಿ ನೀಡಬೇಕೆಂದು ಬಿಬಿಎಂಪಿ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಬೊಮ್ಮಾಯಿ ಉತ್ತರಿಸಿದರು.