ಮೈಸೂರು: ಭಾರತವನ್ನು ಬಲಾಢ್ಯ ಗಣರಾಜ್ಯವನ್ನಾಗಿ ರೂಪಿಸುವಲ್ಲಿ ತನು, ಮನ ಧನ, ತ್ಯಾಗ ಮಾಡಿದ, ಬಲಿದಾನ ನೀಡಿದ ನಾಯಕರು, ಯೋಧರು, ದೇಶಾಭಿಮಾನಿಗಳನ್ನು ನೆನೆಯುವುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಮೈಸೂರಿನ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಜಿಲ್ಲಾಡಳಿತ ಇಂದು ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಸ್ವತಂತ್ರ ಭಾರತಕ್ಕೊಂದು ಸದೃಢ ಸಂವಿಧಾನ ಕಟ್ಟಿಕೊಟ್ಟಿದ್ದು ಡಾ. ಬಿ.ಆರ್.ಅಂಬೇಡ್ಕರ್ ನೇತೃತ್ವದ ಹಿರಿಯರ ತಂಡ.
ಅವರ ಅವಿರತ ಪ್ರಯತ್ನದ ಫಲವಾಗಿ ವಿಶ್ವಕ್ಕೇ ಮಾದರಿಯಾಗಿರುವ ನಮ್ಮ ಸಂವಿಧಾನ ರೂಪುಗೊಂಡಿದೆ ಎಂದು ಹೇಳಿದರು.
ಹಿರಿಯರು ಆಶಿಸಿದಂತೆ ರಾಷ್ಟ್ರವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.
ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ಮುತ್ಸದ್ದಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಪದ್ಮವಿಭೂಷಣ,ಹಿರಿಯ ಸಾಹಿತಿ ಎಸ್.ಎಲ್.ಬೈರಪ್ಪ ಹಾಗೂ ತಮ್ಮ ಸರಳತೆಯ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುವ ಇನ್ಫೋಸಿಸ್ ಫೌಂಡೇಷನ್ ಅಧ್ಯಕ್ಷೆ ಸುಧಾ ಮೂರ್ತಿ ಅವರು ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಖಾದರ್ ವಲ್ಲಿ ದೂದೇಕುಲ, ರಾಣಿ ಮಾಚಯ್ಯ, ನಾಡೋಜ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ, ಶಾ ರಶೀದ್ ಅಹಮದ್ ಕ್ವಾದ್ರಿ, ಸುಬ್ಬರಾಮನ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ರಾಜ್ಯದ ಗರಿಮೆಯನ್ನು ಹೆಚ್ಚಿಸಿದೆ ಎಂದು ಸೋಮಶೇಖರ್ ಹೇಳಿದರು
ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡು ಭಾರತದ ಸಾರ್ವಭೌಮತೆಗೆ ಧಕ್ಕೆ ತಾರದಂತೆ ತನ್ನ ಅಸ್ಮಿತೆಯನ್ನು ಉಳಿಸಿಕೊಂಡು ಅಭಿವೃದ್ಧಿಯೆಡೆಗೆ ಸಾಗುತ್ತಿರುವ ರಾಜ್ಯ ನಮ್ಮ ಕರ್ನಾಟಕ. ಇಂದು ಕರ್ನಾಟಕದ ಸಾಧನೆ ಅನೇಕ ರಾಜ್ಯಗಳಿಗೆ ಮಾದರಿಯಾಗಿದೆ ಎಂದು ಅವರು ತಿಳಿಸಿದರು.
ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ನಮ್ಮ ಸರ್ಕಾರ ‘ಸರ್ವರಿಗೂ ಸಮಬಾಳು – ಸರ್ವರಿಗೂ ಸಮಪಾಲು’ ಎಂಬ ತತ್ವದಲ್ಲಿ ನಂಬಿಕೆ ಇರಿಸಿದ್ದು ಹಲವು ಹೊಸ ಯೋಜನೆಗಳ ಮೂಲಕ ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಆರೋಗ್ಯ, ಕೃಷಿ, ನೀರಾವರಿ ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಗಮನ ಹರಿಸಿದೆ ಎಂದರು.
ಮೇಯರ್ ಶಿವಕುಮಾರ್,ಜಿಲ್ಲಾದಿಕಾರಿ ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್,ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸೀಮಾ ಲಾಟ್ಕರ್ ಮತ್ತಿತರರು ಪಾಲ್ಗೊಂಡಿದ್ದರು.

