ಬೆಂಗಳೂರು: ಅಭಿವೃದ್ಧಿ ಪಥದಲ್ಲಿ ಮುಂಚೂಣಿಯ ರಾಜ್ಯವಾಗಿ ಕರ್ನಾಟಕ ದಾಪುಗಾಲಿಡುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.
ಶುಕ್ರವಾರ ಪ್ರಾರಂಭವಾದ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿದರು.
ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೂಲಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಗಮಿಸಿದ ಕೂಡಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಪತಿ ಬಸವರಾಜ ಹೊರಟ್ಟಿ ಸ್ವಾಗತಿಸಿದರು.
ಸರ್ಕಾರವು ರೈತರು, ಕಾರ್ಮಿಕರು, ಬಡವರು, ದುರ್ಬಲ ವರ್ಗದವರು ಮತ್ತು ಅವಕಾಶ ವಂಚಿತರ ಕಲ್ಯಾಣ ಮತ್ತು ಅಭಿವೃದ್ಧಿಗೆ ಬದ್ಧವಾಗಿದೆ ಎಂದು ತಿಳಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮುಂದಿನ 25 ವರ್ಷಗಳ ಅಮೃತ ಕಾಲದಲ್ಲಿ ಹಾಕಿಕೊಟ್ಟ ಪ್ರಗತಿ ಪಥವನ್ನು ಯಶಸ್ವಿಯಾಗಿ ಕ್ರಮಿಸುವ ವಿಶ್ವಾಸ ನನಗಿದೆ.
ರೈತ ಮತ್ತು ಅವನ ಕುಟುಂಬವನ್ನು ಸದೃಢಗೊಳಿಸಲು ಸರ್ಕಾರವು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಮುಖ್ಯಮಂತ್ರಿ ರೈತ ವಿದ್ಯಾನಿಧಿಯನ್ನು ನೇಕಾರರು, ಕೃಷಿ ಕಾರ್ಮಿಕರು, ಮುಂತಾದ ವಿವಿಧ ವರ್ಗಗಳಿಗೆ ವಿಸ್ತರಿಸಲಾಗಿದೆ. ಅದರಂತೆ 10.79 ಲಕ್ಷ ವಿದ್ಯಾರ್ಥಿಗಳಿಗೆ 484 ಕೋಟಿ ರೂಪಾಯಿಗಳ ವಿದ್ಯಾರ್ಥಿ ವೇತನವನ್ನು ನೇರ ನಗದು ಮೂಲಕ ವರ್ಗಾಯಿಸಲಾಗಿದೆ. ಎಂದು ಸರ್ಕಾರದ ಕಾರ್ಯಗಳನ್ನು ವಿವರಿಸಿದರು.
ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಕಾರ್ಯಗತಗೊಳಿಸಲು ಕ್ರಮ ಕೈಗೊಂಡಿದೆ.
ರಾಜಸ್ವ ಸಂಗ್ರಹಣೆಯಲ್ಲಿ 2023 ರಲ್ಲಿ ಶೇ. 91 ರಷ್ಟು ಸಾಧಿಸಲಾಗಿದೆ. ಕಳೆದ ಸಾಲಿಗೆ ಹೋಲಿಸಿದರೆ 2033 ಕ್ಕೆ ಶೇ. 21 ರಷ್ಟು ಹೆಚ್ಚಳವಾಗಿದೆ ಎಂದು ರಾಜ್ಯಪಾಲರು ತಿಳಿಸಿದರು.

