ನೀರಾವರಿ ಕ್ಷೇತ್ರಕ್ಕೆ  25,000 ಕೋಟಿ ಅನುದಾನ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ 2023-24ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ನೀರಾವರಿ ಕ್ಷೇತ್ರಕ್ಕೆ ಒಟ್ಟು ರೂ. 25,000 ಕೋಟಿ ಅನುದಾನ ಒದಗಿಸಲಾಗಿದೆ.

ಉತ್ತರ ಕರ್ನಾಟಕದ ಪ್ರಮುಖ ಯೋಜನೆಯಾದ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಡಿ  ಪ್ರಸಕ್ತ ಸಾಲಿನಲ್ಲಿ 5, 000 ಕೋಟಿ ರೂ. ಅನುದಾನ ಘೋಷಿಸಿದ್ದಾರೆ.

ಪ್ರಗತಿಯಲ್ಲಿರುವ ಜಗಳೂರು, ಕಿತ್ತೂರು, ಬಾಳಂಬೀಡ, ಹರಪ್ಪನಹಳ್ಳಿ, ಯಾದಗಿರಿ, ರಾಯಚೂರಿನ ವಿವಿಧ ಕೆರೆಗಳ ತುಂಬಿಸುವ ಯೋಜನೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಸಸಾಲಟ್ಟಿ- ಶಿವಲಿಂಗೇಶ್ವರ, ಮಂಟೂರು ಮಹಾಲಕ್ಷ್ಮೀ ಮತ್ತು ವೆಂಕಟೇಶ್ವರ ಏತ ನೀರಾವರಿ ಯೋಜನೆಗಳು ಮತ್ತು ಪೂರಿಗಾಲಿ ಸೂಕ್ಷ್ಮ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು.

ಕಳಸಾ- ಬಂಡೂರಿ ನಾಲಾ ತಿರುವ ಯೋಜನೆಯ ಕಾಮಗಾರಿ ಪ್ರಾರಂಭಿಸಲು ರೂ. 1,000 ಕೋಟಿ ಅನುದಾನ ನೀಡಲಾಗುವುದು ಎಂದು ತಿಳಿಸಿದರು.

ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಭದ್ರಾ ಮೇಲ್ದಂಡೆ ಯೋಜನೆಯ ತೀವ್ರ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಎತ್ತಿನ ಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಪ್ರಥಮ ಹಂತದ ಕಾಮಗಾರಿಗಳು ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದ್ದು, ತುಮಕೂರು ಜಿಲ್ಲೆಯವರೆಗಿನ ಗುರುತ್ವ ಕಾಲುವೆ ಮತ್ತು ಪೀಢರ್ ಕಾಲುವೆ ಕಾಮಗಾರಿ ಪೂರ್ಣಗೊಳಿಸಿ, 2023-24ರಲ್ಲಿ ನೀರು ಪೂರೈಸಲು ಉದ್ದೇಶಿಸಲಾಗಿದೆ.

ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ನೀರು ಪೂರೈಸುವ ಕಾಮಗಾರಿ ಹಾಗೂ ಶ್ರೀನಿವಾಸಪುರ ಮತ್ತು ಕೋಲಾರ ಫೀಡರ್ ಚಾನೆಲ್ ಗಳ ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗುವುದು, ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಿಸಿ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು, ತುಂಗಭದ್ರಾ ಜಲಾಶಯದಲ್ಲಿ ಸಂಗ್ರಹಣಾ ಸಾಮರ್ಥ್ಯದ ಕೊರತೆ ನಿವಾರಿಸಲು ಕೊಪ್ಪಳ ಜಿಲ್ಲೆ ನವಲೆ ಬಳಿ ಸಮತೋಲನಾ ಜಲಾಶಯ ನಿರ್ಮಿಸಲು ಯೋಜನಾ ವರದಿ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.

ಆಂಧ್ರ ಪ್ರದೇಶ ಮತ್ತು ತೆಲಂಗಾಣ ಮುಖ್ಯಮಂತ್ರಿಗಳೊಂದಿಗೆ ಸಭೆ ಜರುಗಿಸಿ ಯೋಜನೆ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದ್ದಾರೆ.