ಮೈಸೂರು: ಬಿಜೆಪಿಯಿಂದ ಟಿಕೆಟ್ ವಂಚಿತರಾಗಿರುವ ಎಸ್.ಎ. ರಾಮದಾಸ್ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಫರ್ ನೀಡಿದ್ದಾರೆ.
ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
ಬಿಜೆಪಿಯಲ್ಲಿ ಹಿರಿಯ ನಾಯಕರನ್ನು ಸರಿಯಾಗಿ ನಡೆಸಿಕೊಂಡಿಲ್ಲ ಈಗ ಆ ಸಾಲಿನಲ್ಲಿ ರಾಮದಾಸ್ ಕೂಡ ಒಬ್ಬರಾಗಿದ್ದಾರೆ ಎಂದು ತಿಳಿಸಿದರು.
ಕೆ ಆರ್ ಕ್ಷೇತ್ರದಲ್ಲಿ ರಾಮದಾಸ್ ಅವರಿಗೆ ಟಿಕೆಟ್ ತಪ್ಪಿ ಹೋಗಿದೆ. ಹಾಗಾಗಿ ಕಾಂಗ್ರೆಸ್ ಸೇರ್ಪಡೆಗೊಂಡರೆ ಆಹ್ವಾನಿಸುತ್ತೇವೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಹೇಳಿದರು.
ನಮ್ಮ ಪಕ್ಷದ ಸಿದ್ಧಾಂತ ಒಪ್ಪಿಕೊಂಡು ಯಾರೇ ಬಂದರೂ ನಾವು ಸ್ವಾಗತಿಸುತ್ತೇವೆ ಎಂದು ಪರೋಕ್ಷವಾಗಿ ರಾಮದಾಸ್ ಅವರಿಗೆ ಸಿದ್ದು ಆಹ್ವಾನಿಸಿದರು.
ವರುಣ ಕ್ಷೇತ್ರಕ್ಕೆ ವಿ ಸೋಮಣ್ಣ ಅವರು ಬರಲು ಬಿ ಎಲ್ ಸಂತೋಷ್ ಕಾರಣ ಆದರೆ ವರುಣ ಕ್ಷೇತ್ರದಲ್ಲಿ ಸ್ಪರ್ಧಿಸಲು ಸೋಮಣ್ಣಗೆ ಇಷ್ಟ ಇರಲಿಲ್ಲ ಎಂದು ಇದೇ ವೇಳೆ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯ ಬಿಜೆಪಿ ಏಕವ್ಯಕ್ತಿಯ ಕಪಿಮುಷ್ಠಿಯಲ್ಲಿದೆ. ವರುಣಾಗೂ ಸೋಮಣ್ಣಗೂ ಸಂಬಂಧವಿಲ್ಲ ಆದರೂ ಅವರನ್ನು ಕಣಕ್ಕಿಳಿಸಿದ್ದಾರೆ ಎಂದು ಸಿದ್ದು ಟೀಕಿಸಿದರು.

