ಬೆಂಗಳೂರು: ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲಾ 5 ಗ್ಯಾರಂಟಿ ಯೋಜನೆಗಳನ್ನೂ ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ
ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾ ಸಂಬಂಧ ಹಮ್ಮಿಕೊಂಡಿದ್ದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಸಿಎಂ ಈ ವಿಷಯ ತಿಳಿಸಿದರು.
ವಿಧಾನಸಭಾ ಚುನಾವಣೆ ಮತ್ತು ಅದಕ್ಕೂ ಮೊದಲು 5 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ, ನಾನು ಮತ್ತು ಪಕ್ಷದ ಅಧ್ಯಕ್ಷರು ರುಜು ಮಾಡಿದ ಗ್ಯಾರಂಟಿ ಕಾರ್ಡುಗಳನ್ನು ರಾಜ್ಯದ ಬಹುತೇಕ ಮನೆಗಳಿಗೆ ತಲುಪಿಸಿದ್ದೆವು.
ಅದರಂತೆ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಈ ಯೋಜನೆಗಳ ಅನುಷ್ಠಾನಕ್ಕೆ ತಾತ್ವಿಕ ಅನುಮೋದನೆ ನೀಡಿದ್ದೆವು, ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ, ಯೋಜನೆಗಳ ಅನುಷ್ಠಾನ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಿದ್ಧರಾಮಯ್ಯ ಸ್ಪಷ್ಟಪಡಿಸಿದರು.
ಯಾವುದೇ ಜಾತಿ-ಧರ್ಮ-ಲಿಂಗ-ಭಾಷೆಯ ತಾರತಮ್ಯ ಇಲ್ಲದೆ ಸಮಸ್ತ ಕನ್ನಡಿಗರಿಗೆ ಈ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಹೇಳಿದರು.
ಪ್ರಣಾಳಿಕೆಯಲ್ಲಿ ಘೋಷಿಸಿದಂತೆ 200 ಯುನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸಲು ಸಚಿವ ಸಂಪುಟ ತೀರ್ಮಾನಿಸಿದೆ.
ಈ ಯೋಜನೆಯಡಿ ಬಳಕೆದಾರರ ಕಳೆದ 12 ತಿಂಗಳ ವಿದ್ಯುತ್ ಬಳಕೆಯ ಸರಾಸರಿ ಮೇಲಿನ ಶೇ. 10 ರಷ್ಟು ಉಚಿತ ವಿದ್ಯುತ್ ಒದಗಿಸಲಾಗುವುದು.
ಜುಲೈ 1 ರಿಂದ ಬಳಕೆಯಾಗುವ ವಿದ್ಯುತ್ ಗೆ ಈ ಯೋಜನೆ ಅನ್ವಯವಾಗುತ್ತದೆ. ಅಲ್ಲಿಯ ವರೆಗಿನ ವಿದ್ಯುತ್ ಬಳಕೆಗೆ ಸಂಬಂಧಿಸಿದ ಬಿಲ್ಲನ್ನು ಬಳಕೆದಾರರು ಪಾವತಿಸಬೇಕು.
ಆಗಸ್ಟ್ ತಿಂಗಳಿನಿಂದ ಈ ಯೋಜನೆಯ ಫಲಾನುಭವಿಗಳು ವಿದ್ಯುತ್ ಬಿಲ್ ಕಟ್ಟಬೇಕಿಲ್ಲ ಎಂದು ಸಿದ್ದರಾಮಯ್ಯ ಅವರು ಘೋಷಿಸಿದರು.
ಬಿಪಿಎಲ್ ಹಾಗೂ ಎಪಿಎಲ್ ಕುಟುಂಬಗಳ ಯಜಮಾನಿಯ ಖಾತೆಗೆ ಮಾಸಿಕ 2000 ರೂ. ಮೊತ್ತ ವರ್ಗಾವಣೆ ಮಾಡಲಾಗುವುದು.
ಈ ಯೋಜನೆಯ ಸೌಲಭ್ಯ ಪಡೆಯಲು ಮಹಿಳೆಯರು ಅರ್ಜಿ ಸಲ್ಲಿಸಬೇಕು. ಇದರಲ್ಲಿ ಮನೆಯ ಯಜಮಾನಿ ಯಾರು ಎಂಬುದನ್ನು ಘೋಷಿಸಬೇಕು; ಬ್ಯಾಂಕ್ ಖಾತೆ ಸಂಖ್ಯೆ, ಆಧಾರ್ ಸಂಖ್ಯೆ ಮಾಹಿತಿ ಒದಗಿಸಬೇಕು.
ಜೂನ್ 15 ರಿಂದ ಜುಲೈ 15 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು. ಜುಲೈ 15 ರಿಂದ ಆಗಸ್ಟ್ 15ರ ಅವಧಿಯಲ್ಲಿ ಅರ್ಜಿಗಳನ್ನು ಪರಿಶೀಲಿಸಿ, ಅಗತ್ಯ ತಂತ್ರಾಂಶಗಳನ್ನು ಅಭಿವೃದ್ಧಿ ಪಡಿಸಿ, ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯ ದಿನ ಈ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಸಿಎಂ ತಿಳಿಸಿದರು.
ಹಿಂದಿನ ತಮ್ಮ ಸರ್ಕಾರದ ಅವಧಿಯಲ್ಲಿ ನೀಡಲಾಗುತ್ತಿದ್ದ 7 ಕೆಜಿ ಆಹಾರ ಧಾನ್ಯವನ್ನು ಬಿಜೆಪಿ ಸರ್ಕಾರ 5 ಕೆಜಿಗೆ ಇಳಿಸಿದೆ.
ಇದೀಗ ಆಹಾರಧಾನ್ಯದ ಪ್ರಮಾಣವನ್ನು 10 ಕೆಜಿಗೆ ಹೆಚ್ಚಿಸಲಾಗುವುದು. ಜೂನ್ ತಿಂಗಳ ಪಡಿತರ ವಿತರಣೆ ಪ್ರಕ್ರಿಯೆ ಪ್ರಾರಂಭವಾಗಿರುವುದರಿಂದ ಹಾಗೂ ಆಹಾರ ಧಾನ್ಯ ಖರೀದಿಸಬೇಕಾಗಿರುವುದರಿಂದ ಜುಲೈ 1 ರಿಂದ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು.
ಅಂತ್ಯೋದಯ ಕಾರ್ಡುದಾರರು ಹಾಗೂ ಬಿಪಿಎಲ್ ಕಾರ್ಡುದಾರರಿಗೆ ಈ ಯೋಜನೆ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದರು.
ವಿದ್ಯಾರ್ಥಿನಿಯರೂ ಸೇರಿದಂತೆ ಎಲ್ಲ ವರ್ಗಗಳ ಮಹಿಳೆಯರಿಗೆ ಎಸಿ ಹಾಗೂ ಲಕ್ಸುರಿ ಬಸ್ ಗಳನ್ನು ಹೊರತುಪಡಿಸಿ ಇತರ ಎಲ್ಲ ಬಸ್ ಗಳಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗುವುದು.
ಜೂನ್ 11 ರಿಂದ ಈ ಯೋಜನೆಗೆ ಚಾಲನೆ ನೀಡಲಾಗುವುದು. ಈ ಯೋಜನೆಯು ಶೇ. 94 ರಷ್ಟು ಮಹಿಳಾ ಪ್ರಯಾಣಿಕರಿಗೆ ಅನುಕೂಲಕರವಾಗಲಿದೆ.ಬಸ್ ಗಳಲ್ಲಿ ಶೇ. 50 ರಷ್ಟು ಸೀಟುಗಳನ್ನು ಪುರುಷರಿಗೆ ಮೀಸಲಿರಿಸಲಾಗುವುದು ಎಂದು ಸಿದ್ದು ಪ್ರಕಟಿಸಿದರು.
2022-23ನೇ ಶೈಕ್ಷಣಿಕ ವರ್ಷದಲ್ಲಿ ವೃತ್ತಿಪರ ಕೋರ್ಸುಗಳೂ ಸೇರಿದಂತೆ ಎಲ್ಲ ವಿಧದ ಪದವೀಧರ ಯುವಕ-ಯುವತಿಯರು, ಡಿಪ್ಲೊಮಾ ಹೊಂದಿದವರಿಗೆ ಭತ್ಯೆ ಯೋಜನೆ ಅನ್ವಯಿಸುತ್ತದೆ.
ಪದವಿ ಪಡೆದು 180 ದಿನಗಳಾದರೂ ಉದ್ಯೋಗ ದೊರೆಯದ ಪದವೀಧರರಿಗೆ 24 ತಿಂಗಳ ಅವಧಿಗೆ ಮಾಸಿಕ 3000 ರೂ. ಹಾಗೂ ಡಿಪ್ಲೊಮಾದಾರರಿಗೆ ಮಾಸಿಕ 1500 ರೂ. ನಿರುದ್ಯೋಗ ಭತ್ಯೆ ನೀಡಲಾಗುವುದು. ಈ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬೇಕಾಗಿದ್ದು, ಲಿಂಗತ್ವ ಅಲ್ಪಸಂಖ್ಯಾತರಿಗೂ ಈ ಸೌಲಭ್ಯ ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

