ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ಅಭಿಪ್ರಾಯ ಸಂಗ್ರಹಿಸಲು ಪೋರ್ಟಲ್ ಆರಂಭಿಸುತ್ತಿದ್ದೇವೆ ಎಂದು ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಬೆಂಗಳೂರು ಅಭಿವೃದ್ಧಿ ಬಗ್ಗೆ ನನಗೆ ಸಾರ್ವಜನಿಕರ ಅಭಿಪ್ರಾಯ ಬಹಳ ಮುಖ್ಯ ಎಂದು ಹೇಳಿದರು.
ಈಗಾಗಲೇ ಬೆಂಗಳೂರಿನ ಸರ್ವಪಕ್ಷ ಶಾಸಕರ ಸಭೆ ಮಾಡಿದ್ದೇನೆ. ಬೆಂಗಳೂರಿನ ಎಲ್ಲಾ ವರ್ಗಗಳ ಬ್ರ್ಯಾಂಡ್ ಅಂಬಾಸಿಡರ್ ಗಳ ಜತೆ ಚರ್ಚಿಸಿದ್ದೇನೆ. ವಚನ ಜತೆಗೆ ಸಾರ್ವಜನಿಕರ ಅಭಿಪ್ರಾಯವೂ ಮುಖ್ಯ. ಹೀಗಾಗಿ ಅಭಿಪ್ರಾಯ ಸಂಗ್ರಹಿಸಲು ಪೋರ್ಟಲ್ ಆರಂಭಿಸುತ್ತಿದ್ದೇವೆ ಎಂದು ತಿಳಿಸಿದರು.
ಬೆಂಗಳೂರಿನ ನಾಗರೀಕರು ಹಾಗೂ ವಿದೇಶದಲ್ಲಿರುವ ಕನ್ನಡಿಗರು ಬೆಂಗಳೂರಿನ ಅಭಿವೃದ್ಧಿ ವಿಚಾರವಾಗಿ ತಮ್ಮ ಸಲಹೆಗಳನ್ನು www.brandbengaluru.karnataka.gov.in ವೆಬ್ ಸೈಟ್ ನಲ್ಲಿ ನಿಗದಿತ ಕಾಲಮಿತಿ ಜೂನ್ 30 ರ ಒಳಗಾಗಿ ನೀಡಬೇಕು ಎಂದು ಡಿಕೆಶಿ ಮನವಿ ಮಾಡಿದರು.
ಶಾಸಕರು, ಅಧಿಕಾರಿಗಳು, ಅಂಬಾಸಿಡರ್ ಗಳ ಸಭೆಯಲ್ಲಿ ವಾಹನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹೈ ಡೆನ್ಸಿಟಿ ಕಾರಿಡಾರ್, ಮೆಟ್ರೋ ಸಂಪರ್ಕ ವಿಸ್ತರಣೆ, ಮೊನೊ ರೈಲು, ಉಪನಗರ ರೈಲು, ರಸ್ತೆ ಅಗಲೀಕರಣ, ಎಲಿವೇಟೆಡ್ ರಸ್ತೆ, ನೈಸ್ ರಸ್ತೆಯನ್ನು ವರ್ತುಲ ರಸ್ತೆಯಾಗಿ ಮಾರ್ಪಾಡು, ನಗರದಲ್ಲಿ ಸುರಂಗ ರಸ್ತೆಗಳ ನಿರ್ಮಾಣದಂತಹ ಸಲಹೆ ನೀಡಿದ್ದಾರೆ ಎಂದು ಹೇಳಿದರು.
ಸ್ವಚ್ಛತೆ, ಪರಿಸರ ವಿಚಾರದಲ್ಲಿ ಕಸ ವಿಲೇವಾರಿ ಹಾಗೂ ಕೊಳಚೆ ನೀರು ನಿರ್ವಹಣೆ, ಕೊಳಚೆ ನೀರು ಪರಿಷ್ಕರಣೆ ಮತ್ತು ಮರುಬಳಕೆ, ಕಾವೇರಿ ನೀರು ಪೂರೈಕೆ, ಕೊಳಗೇರಿ ಪ್ರದೇಶ ಅಭಿವೃದ್ಧಿ ಸೇರಿದಂತೆ ದಕ್ಷ ಆಡಳಿತ, ಭ್ರಷ್ಟಾಚಾರ ನಿಯಂತ್ರಣದ ಬಗ್ಗೆ ಅನೇಕ ಸಲಹೆ ನೀಡಿದ್ದಾರೆ.
ಇದೆಲ್ಲದರ ಬಗ್ಗೆ ದೊಡ್ಡ ನಾಯಕರ ಮನೆಗೆ ಹೋಗಿ ಚರ್ಚೆ ಮಾಡಲು ತೀರ್ಮಾನಿಸಿದ್ದೇನೆ. ಮಾಜಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದು, ಇನ್ನು ಕೆಲವರನ್ನು ಭೇಟಿ ಮಾಡಬೇಕು. ಬೊಮ್ಮಾಯಿ ಅವರ ಸಮಯ ಕೇಳಿದ್ದೇನೆ ಅವರು ಬ್ಯುಸಿ ಇದ್ದ ಕಾರಣ ಭೇಟಿ ಮಾಡಿಲ್ಲ. ಅವರ ವಿಚಾರಧಾರೆಗಳನ್ನು ತಿಳಿಯಬೇಕಿದೆ ಎಂದರು ಡಿಕೆಶಿ.
ಬೆಂಗಳೂರಿನ ಸಂಚಾರದಟ್ಟಣೆ ಬಗ್ಗೆ ಎಲ್ಲರೂ ಮಾತನಾಡುತ್ತಾರೆ. ಆದರೆ ಬೇರೆ ನಗರಗಳ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ, ಬೆಂಗಳೂರನ್ನು ಇಡೀ ವಿಶ್ವ ನೋಡುತ್ತಿದೆ.
ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗದಲ್ಲಿ ಅಂಗಡಿ ಇಟ್ಟುಕೊಳ್ಳಲಾಗಿದೆ. ಈ ಬಗ್ಗೆ ಗಮನ ಹರಿಸಬೇಕು. ಸಂಚಾರ ದಟ್ಟಣೆ ವಿಚಾರವಾಗಿ ನಿವೃತ್ತ ಟ್ರಾಫಿಕ್ ಪೊಲೀಸರ ಅಭಿಪ್ರಾಯ ಪಡೆಯುತ್ತೇನೆ. ಅನುಭವದ ಆಧಾರದ ಮೇಲೆ ಬರುವ ಸಲಹೆಗಳಿಗೆ ಹೆಚ್ಚಿನ ತೂಕ ಇರುತ್ತದೆ ಎಂದು ಅಭಿಪ್ರಾಯ ಪಟ್ಟರು.
ರಸ್ತೆ ಗುಂಡಿ ವಿಚಾರವಾಗಿ ಪ್ರತ್ಯೇಕ ಯೋಜನೆ ರೂಪಿಸುತ್ತೇವೆ. ತ್ಯಾಜ್ಯ ವಿಲೇವಾರಿ ಕುರಿತು ಅಧಿಕಾರಿಗಳ ಸಭೆ ಮಾಡಿದ್ದೇನೆ. ಈ ಬಗ್ಗೆ ಉತ್ತಮ ನಿರ್ವಹಣೆ ಮಾಡುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ಅಧ್ಯಯನ ಮಾಡಲು ತೀರ್ಮಾನಿಸಿದ್ದೇವೆ ಎಂದು ಡಿಸಿಎಂ ಹೇಳಿದರು
ರಾಜ್ಯ ಹಾಗೂ ದೇಶಕ್ಕೆ ಬೆಂಗಳೂರಿನಿಂದ ಹೆಚ್ಚಿನ ಪ್ರಮಾಣದ ಹಣ ತೆರಿಗೆ ರೂಪದಲ್ಲಿ ಹೋಗುತ್ತಿದೆ. ಬೆಂಗಳೂರಿಗೆ ಉದ್ಯೋಗ, ಶಿಕ್ಷಣಕ್ಕಾಗಿ ಬಂದವರು ಮತ್ತೆ ತಮ್ಮ ಊರಿಗೆ ಹೋಗುತ್ತಿಲ್ಲ. ಇಲ್ಲೇ ನೆಲೆಸುತ್ತಿದ್ದಾರೆ.
ಹೀಗಾಗಿ ನಮ್ಮ ಪ್ರಣಾಳಿಕೆಯಲ್ಲಿ ಬೆಂಗಳೂರಿನ ಹೊರೆ ತಪ್ಪಿಸಲು 2-3ನೇ ದರ್ಜೆ ನಗರಗಳ ಅಭಿವೃದ್ಧಿ, ಎಲ್ಲಾ ಪಂಚಾಯ್ತಿ ಮಟ್ಟದಲ್ಲಿ ಉನ್ನತ ಗುಣಮಟ್ಟದ ಶಿಕ್ಷಣ ನೀಡುವ ಬಗ್ಗೆ ಕಾರ್ಯಕ್ರಮ ರೂಪಿಸಿದ್ದೇವೆ ಎಂದು ಡಿಕೆಶಿ ತಿಳಿಸಿದರು.
ಬ್ರ್ಯಾಂಡ್ ಬೆಂಗಳೂರಿನಲ್ಲಿ ಹಸಿರು ನಗರವಾಗಿ ಪರಿವರ್ತಿಸಲು ಯೋಜನೆ ಇದೆಯೇ ಎಂದು ಕೇಳಿದ್ದಕ್ಕೆ ಈ ಬಗ್ಗೆ ನಿಮ್ಮ ಬಳಿ ಯಾವುದಾದರೂ ಉತ್ತಮ ಸಲಹೆ ಇದ್ದರೆ ನೀಡಿ. ನಾವು ಅದನ್ನು ಸ್ವಾಗತಿಸುತ್ತೇವೆ ಎಂದು ಹೇಳಿದರು.
ಎಲ್ಲಾ ಇಲಾಖೆಗಳಲ್ಲಿ ವರ್ಗಾವಣೆ ದಂಧೆಗೆ ರೇಟ್ ಫಿಕ್ಸ್ ಆಗಿದೆ ಎಂದು ಬಿಜೆಪಿ ಆರೋಪಿಸಿದೆಯಲ್ಲಾ ಎಂಬ ಪ್ರಶ್ನೆಗೆ ಅವರು ತಡ ಮಾಡದೇ ಲೋಕಾಯುಕ್ತಕ್ಕೆ ದೂರು ನೀಡಲಿ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

