ಜೂ. 27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ -ಲಕ್ಷ್ಮಿ ಹೆಬ್ಬಾಳ್ಕರ್

ಮೈಸೂರು: ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂನ್ 27ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಸಚಿವೆ ಮಾತನಾಡಿದರು.

ರಾಜ್ಯದಲ್ಲಿ ಒಳ್ಳೆ ಮಳೆಯಾಗಲಿ ಎಂದು  ದೇವಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ. ಕಾಂಗ್ರೆಸ್ ಪಕ್ಷ‌ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿ ಎಂಬುದಾಗಿ ಚಾಮುಂಡಿ ತಾಯಿಯಲ್ಲಿ ಹರಕೆ ಕಟ್ಟಿದ್ದೆ.

ದೇವಿ ಮುಂದೆ ಸೆರೆಗೊಡ್ಡಿ ಬೇಡಿ ಕೊಂಡಿದ್ದೆ. ಇದೀಗ ಅಧಿಕಾರಕ್ಕೆ ಬಂದಿದ್ದೇವೆ. ಹೀಗಾಗಿ ಬೆಟ್ಟಕ್ಕೆ ಬಂದು ಹರಕೆ ತೀರಿಸಿದ್ದೇನೆ ಎಂದು ಹೇಳಿದರು.

ಗೃಹಲಕ್ಷ್ಮೀ ಯೋಜನೆ ಜಾರಿ ತಡವಾಗುತ್ತಿಲ್ಲ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಆ್ಯಪ್​ ತಯಾರಾಗಿದೆ. ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ. ಜೂ.27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ‌ ಎಂದು ಸ್ಪಷ್ಟಪಡಿಸಿದರು.

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ಪಾವತಿಸಬಾರದು. ಆಗಸ್ಟ್​ 16 ಅಥವಾ 17ರಂದು ಮನೆ ಯಜಮಾನಿ ಖಾತೆಗೆ ಹಣ ತಲುಪುವುದು ನಿಶ್ಚಿತ ಎಂದು ಆಶ್ವಾಸನೆ ನೀಡಿದರು ಲಕ್ಷ್ಮೀ ಹೆಬ್ಬಾಳ್ಕರ್.

ಜೂನ್ 27 ರಂದು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಅವರಿಗೆ ಆ್ಯಪ್ ತೋರಿಸುತ್ತೇವೆ. ನಂತರ ಅರ್ಜಿ ಸಲ್ಲಿಕೆಗೆ ಆ್ಯಪ್ ಬಿಡುಗಡೆ ಮಾಡುತ್ತೇವೆ.ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ ಎಂದು‌‌‌ ಸ್ಪಷ್ಟಪಡಿಸಿದರು.

ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆ್ಯಪ್ ರಚಿಸಿದ್ದೇವೆ. ಒಂದು ರೂಪಾಯಿ ಹಣವನ್ನು ಅರ್ಜಿ ಸಲ್ಲಿಕೆಗೆ ಕೊಡಬೇಡಿ. ಅರ್ಜಿ ಸಲ್ಲಿಸಿ ಸ್ವೀಕೃತಿ ಪತ್ರ ಸಿಕ್ಕರೆ ಅಲ್ಲಿಗೆ ನೀವು ಫಲಾನುಭವಿ ಪಟ್ಟಿಗೆ ಸೇರುತ್ತೀರಾ. ಇದರಲ್ಲಿ ಯಾವುದೇ ಗೊಂದಲಗಳು ಬೇಡ ಎಂದು ಹೇಳಿದರು.