ಬೆಂಗಳೂರು: ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ವಿಧಾನಸೌಧದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿ ಸಿಎಂ ಮಾತನಾಡಿದರು.
ಕೇಂದ್ರದವರೇನು ಪುಕ್ಕಟ್ಟೆ ಕೊಡುತ್ತಿರಲಿಲ್ಲ. ಕೆಜಿಗೆ 34 ರೂ ನಮ್ಮಿಂದ ತೆಗೆದುಕೊಳ್ಳುತಿದ್ದರು ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡ ನಾಡಿನ ಜನರಿಗೆ ಅಕ್ಕಿ ಕೊಡುವುದನ್ನು ಬಂದ್ ಮಾಡಿದ ಕೇಂದ್ರ ಬಳಿಕ ಇ-ಹರಾಜು ಮೂಲಕ ಆ ಅಕ್ಕಿಯನ್ನು ಹರಾಜು ಹಾಕಲು ಮುಂದಾಯಿತು.
ಆದರೆ ಈಗ ಇ-ಹರಾಜು ಮೂಲಕ ಅಕ್ಕಿ ಖರೀದಿಸಲು ಯಾರೂ ಮುಂದೆ ಬರುತ್ತಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನು ನಾವು ಡರ್ಟಿ ಪಾಲಿಟಿಕ್ಸ್ ಅಂತ ಕರೆಯಬೇಕೋ ಬೇಡವೋ ಎಂದು ಪ್ರಶ್ನಿಸಿದರು.
ಇದನ್ನು ಕನ್ನಡ ಜನತೆ ವಿರುದ್ಧದ ದ್ವೇಷದ ರಾಜಕಾರಣ ಎಂದು ಕರೆಯಬೇಕೋ ಬೇಡವೋ ಎಂದರು.
4 ಕೋಟಿ 42 ಲಕ್ಷ ಫಲಾನುಭವಿಗಳಿಗೆ ಈಗ ತಲಾ 170ರೂ ನೇರವಾಗಿ ಅವರ ಖಾತೆಗೆ ವರ್ಗಾವಣೆ ಆಗುತ್ತಿದೆ. ಬಡವರು-ಮಧ್ಯಮ ವರ್ಗದವರು ಎರಡು ಹೊತ್ತು ತಿಂದರೆ ಬಿಜೆಪಿಗೆ ಏನು ಹೊಟ್ಟೆಯುರಿ ಎಂದು ಸಿದ್ದರಾಮಯ್ಯ ಕೇಳಿದರು.
ನಿಮ್ಮ ಖಾತೆಗೆ ಬರುವ ಹಣವನ್ನು ಊಟ, ಆಹಾರಕ್ಕಾಗಿ ಖರ್ಚು ಮಾಡಿ ನೆಮ್ಮದಿಯ ಬದುಕು ನಿರ್ವಹಿಸಿ ಎಂದು ಜನತೆಗೆ ಸಿದ್ದು ಕರೆ ನೀಡಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅನ್ನಭಾಗ್ಯದ ಲೋಗೋ ಬಿಡುಗಡೆ ಮಾಡಿದರು. ಯೋಜನೆಯ ಮಾಹಿತಿ ಪತ್ರವನ್ನು ಆರೋಗ್ಯ ಸಚಿವರಾದ ಕೆ.ಹೆಚ್.ಮುನಿಯಪ್ಪ ಬಿಡುಗಡೆ ಮಾಡಿದರು.
ಸಚಿವರುಗಳಾದ ರಾಮಲಿಂಗಾರೆಡ್ಡಿ, ಬಿ.ಎಸ್.ಸುರೇಶ್, ಹೆಚ್.ಕೆ.ಪಾಟೀಲ್ ಸೇರಿ ಹಲವು ಸಚಿವರು ಮತ್ತು ಶಾಸಕರುಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮೈಸೂರು ಮತ್ತು ಕೋಲಾರ ಜಿಲ್ಲೆಗಳ ಫಲಾನುಭವಿಗಳಿಗೆ ಮೊದಲಿಗೆ ಹಣ ವರ್ಗಾವಣೆ ಆಯಿತು
ನಾಳೆಯಿಂದ ಪ್ರತಿದಿನ ಹಂತ ಹಂತವಾಗಿ ರಾಜ್ಯದ ಸರ್ವ ಫಲಾನುಭವಿಗಳಿಗೂ ಹಣ ವರ್ಗಾವಣೆ ಆಗಲಿದೆ.
ಡಿಬಿಟಿ ಬಳಿಕ ಯೋಜನೆಯ ಪ್ರಚಾರ ವಿಡಿಯೊವನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದರು.

