ಘಟಬಂಧನ್ ನಾಯಕರಿಗೆ ಐಎಎಸ್ ಅಧಿಕಾರಿಗಳ ಆತಿಥ್ಯ: ಹೆಚ್.ಡಿ.ಕೆ ಕಿಡಿ

ಬೆಂಗಳೂರು: ಘಟಬಂಧನ್ ಸಭೆಗೆ ಆಗಮಿಸಿರುವ ಹೊರರಾಜ್ಯದ ರಾಜಕೀಯ ನಾಯಕರ ಆತಿಥ್ಯಕ್ಕೆ ಐಎಎಸ್ ಅಧಿಕಾರಿಗಳ ನಿಯೋಜನೆ ಮಾಡಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಅವರು, ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಐಎಎಸ್ ಜೀತ ಪದ್ಧತಿಯನ್ನು ಜಾರಿಗೆ ತಂದು ಕರ್ನಾಟಕದ ಹೆಮ್ಮೆ, ಪರಂಪರೆಗೆ ಘಟಶ್ರಾದ್ಧ ಮಾಡಿದೆ ಎಂದು ಬರೆದಿದ್ದಾರೆ.

ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿ ಕಾಂಗ್ರೆಸ್ ನಡೆ ತಪ್ಪುನಡೆ ಅನುಸರಿಸಿದೆ

ನುಡಿದಂತೆ ನಡೆಯುವುದು ಎಂದರೆ ಇದೇ ಏನು ಎಂದು ಅವರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಇದು ರಾಜ್ಯ ಸರಕಾರಿ ಕಾರ್ಯಕ್ರಮ ಅಲ್ಲ, ಹೊಸ ಸರಕಾರದ ಪ್ರಮಾಣ ಸ್ವೀಕಾರವೂ ಅಲ್ಲ. ಕೇವಲ ರಾಜಕೀಯ ಸಭೆಯಷ್ಟೇ.

ಇಂತಹ ಸಭೆಗೆ ಬಂದ ರಾಜಕೀಯ ನಾಯಕರಿಗೆ ಆಥಿತ್ಯ ನೀಡಲು ಜವಾಬ್ದಾರಿಯುತ ಅಧಿಕಾರಿಗಳನ್ನು ಕಳಿಸಿದ್ದು ಆರೂವರೆ ಕೋಟಿ ಕನ್ನಡಿಗರಿಗೆ ಮಾಡಿದ ಅಪಚಾರ, ರಾಜ್ಯದ ಪಾಲಿಗೆ ಮಹಾ ದುರಂತ ಎಂದು ಹೇಳಿದ್ದಾರೆ.

ಯಾವುದೇ ಒಂದು ರಾಜ್ಯದ ಅಭಿವೃದ್ಧಿ, ಆಡಳಿತ, ಮುನ್ನಡೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಐಎಎಸ್ ಅಧಿಕಾರಿಗಳು ಕೇವಲ ಅಧಿಕಾರಿಗಳಷ್ಟೇ ಅಲ್ಲ; ಆಯಾ ರಾಜ್ಯಗಳ ಕ್ಷಮತೆ, ದಕ್ಷತೆಯ ಪ್ರತೀಕ.

ಅಂಥವರನ್ನು ಇನ್ನೊಬ್ಬರ ಆಜ್ಞಾಪಾಲಕರನ್ನಾಗಿ ಮಾಡಿ, ಬಾಗಿಲು ಕಾಯುವ ಕೆಲಸ ಹಚ್ಚಿದ್ದು ಆಡಳಿತ ಪಕ್ಷದ ಅಹಂಕಾರದ ಪರಮಾವಧಿ ಎಂದು ಎಚ್‌ಡಿಕೆ ಗರಂ ಆಗಿ ನುಡಿದಿದ್ದಾರೆ.

ಇದು ಐಎಎಸ್ ಸೇವಾ ನೀತಿ ಸಂಹಿತೆಯ ಉಲ್ಲಂಘನೆ. ಇದು ತಮ್ಮ ಸ್ವಾಭಿಮಾನ, ಗೌರವಕ್ಕೆ ಧಕ್ಕೆ ತರುವಂತದ್ದು ಎಂದು ಗೊತ್ತಿದ್ದರೂ ಅಧಿಕಾರಿಗಳು ಈ ಕೆಲಸಕ್ಕೆ ಒಪ್ಪಿದ್ದು ನನಗೆ ಆಘಾತ ಉಂಟು ಮಾಡಿದೆ.

ಇಂಥ ವಿವಾದಾಸ್ಪದ ಆದೇಶ ಹೊರಡಿಸಿದ ಮುಖ್ಯ ಕಾರ್ಯದರ್ಶಿಗಳು ಜನತೆಗೆ ಉತ್ತರ ಕೊಡಲೇಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಸತ್ಯಯುಗದಲ್ಲಿ ಹಿರಣ್ಯಕಶಿಪು ಅಷ್ಟದಿಕ್ಪಾಲಕರನ್ನು ಸೆರೆಹಿಡಿದು ಮೆಟ್ಟಿಲು ಮಾಡಿಕೊಂಡ ಪಾಪಕ್ಕೆ ಸರ್ವನಾಶವಾದ.

ಕಾಂಗ್ರೆಸ್ ಕೂಡ 30 ಐಎಎಸ್ ಅಧಿಕಾರಿಗಳನ್ನು ರಾಜಕಾರಣಿಗಳ ದ್ವಾರಪಾಲಕರನ್ನಾಗಿ ಮಾಡಿ ತನ್ನ ನಾಶಕ್ಕೆ ತಾನೇ ನಾಂದಿ ಹಾಡಿದೆ ಎಂದು ಎಚ್ ಡಿ ಕೆ ಹೇಳಿದ್ದಾರೆ.