ಆಡಳಿತ ಯಂತ್ರ ದುರುಪಯೋಗ ಮಾಡಿಲ್ಲ ಶಿಷ್ಟಾಚಾರ ಪಾಲಿಸಿದ್ದೇವೆ : ಡಿಕೆಶಿ

ಬೆಂಗಳೂರು: ರಾಷ್ಟ್ರ ರಾಜಕಾರಣದ ವಿರೋಧ ಪಕ್ಷಗಳ ಪ್ರಮುಖ ನಾಯಕರ ಸಮಾವೇಶಕ್ಕಾಗಿ ರಾಜ್ಯ ಸರ್ಕಾರದ ಆಡಳಿತ ಯಂತ್ರ ದುರುಪಯೋಗಪಡಿಸಿಕೊಂಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಟೀಕೆಗೆ ಪ್ರತಿಕ್ರಿಯಿಸಿದ ಅವರು, ಶಿಷ್ಟಾಚಾರ ಪಾಲನೆಗಾಗಿ ಹಿಂದಿನಿಂದ ನಡೆದುಕೊಂಡು ಬಂದಿರುವ ಸಂಪ್ರದಾಯವನ್ನೇ ಪಾಲಿಸಿದ್ದೇವೆ ಎಂದು ತಿಳಿಸಿದರು.

ಸಭೆಯಲ್ಲಿ ಭಾಗವಹಿಸುತ್ತಿರುವ ರಾಷ್ಟ್ರ ನಾಯಕರಲ್ಲಿ ಬಹಳಷ್ಟು ಮಂದಿ ಮುಖ್ಯಮಂತ್ರಿಗಳು, ಕೇಂದ್ರದ ರಾಜ್ಯ ಸಚಿವರು ಸೇರಿದಂತೆ ಸಾಂವಿಧಾನಿಕ ಹುದ್ದೆ ಹೊಂದಿರುವವರು ಇದ್ದಾರೆ. ಅವರುಗಳು ರಾಜ್ಯದ ಅತಿಥಿಗಳಾಗಿರುವುದರಿಂದ ಶಿಷ್ಟಾಚಾರದ ವ್ಯಾಪ್ತಿಗೊಳಪಡಲಿದ್ದಾರೆ.

ಅವರುಗಳನ್ನು ಉಪಚರಿಸಲು ತಲಾ ಒಬ್ಬರಿಗೆ ಐಎಎಸ್ ಅಧಿಕಾರಿಯನ್ನು ನಿಯೋಜಿಸಲಾಗಿದೆ. 30ಕ್ಕೂ ಹೆಚ್ಚು ಮಂದಿ ಪ್ರಮುಖ ನಾಯಕರ ರಕ್ಷಣೆ ಹಾಗೂ ಇತರ ಆತಿಥ್ಯದ ಜವಾಬ್ದಾರಿಗಳನ್ನು ನಿರ್ವಹಣೆ ಮಾಡಲಾಗುತ್ತಿದೆ.

ರಾಜ್ಯದ ಅತಿಥಿಗಳನ್ನು ಶಿಷ್ಟಾಚಾರದ ಪ್ರಕಾರ ಗೌರವಪೂರ್ವಕವಾಗಿ ನಡೆಸಿಕೊಳ್ಳುವುದು ರಾಜ್ಯದ ಸಂಪ್ರದಾಯ. ಅದನ್ನೇ ಪಾಲನೆ ಮಾಡಲಾಗುತ್ತಿದೆ ಎಂದು ಡಿಕಿಶಿ ತಿಳಿಸಿದರು.

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಸಭೆ ಅತ್ಯಂತ ಮಹತ್ವದ್ದಾಗಿದ್ದು, ಪ್ರಮುಖ ಬದಲಾವಣೆಗಳನ್ನು ನಿರೀಕ್ಷಿಸಲಾಗುತ್ತಿದೆ.

ವಿರೋಧ ಪಕ್ಷಗಳು ಏನಾದರೂ ಟೀಕೆ ಮಾಡಿಕೊಳ್ಳಲಿ. ನಾವು ಆ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.

ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಾವೇ ಹೇಳಿಕೊಂಡಿರುವ ಪ್ರಕಾರ, ಬಿಜೆಪಿಯ ಆಹ್ವಾನಕ್ಕಾಗಿ ಕಾದು ಕುಳಿತಿದ್ದಾರೆ. ವಿರೋಧ ಪಕ್ಷದ ನಾಯಕನ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ಟಾಂಗ್ ನೀಡಿದರು.